ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮುಂಬರುವ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನುಂದೆ ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಂದ ವಿನಾಯತಿ ನೀಡಬೇಕು ಎಂದು CITU ನೇತೃತ್ವದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನಿರಂತರವಾಗಿ ಹೋರಾಟಗಳನ್ನು ನಡೆಸಿತ್ತು. ಇತ್ತೀಚೆಗೆ ಸಂಘಟನೆಯ ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮಿ ಮತ್ತು ಪ್ರಧಾನಕಾರ್ಯದರ್ಶಿ ಎಚ್ ಎಸ್ ಸುನಂದಾ ಅವರು ಡಾ. ಶಾಲಿನಿ ರಜನೀಶ್ ಅವರಿಗೆ ಮನವಿಯನ್ನು ಮಾಡಿದ್ದರು.
