ಅಂಗನವಾಡಿಗಳಲ್ಲಿ ಎಲ್‌ಕೆಜಿ- ಯುಕೆಜಿ ಆರಂಭಿಸಿ – ಅಂಗನವಾಡಿ ನೌಕರರ ಬೃಹತ್‌ ಪ್ರತಿಭಟನೆ

ಬೆಂಗಳೂರು :  ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ನಡೆಸುವ ಮೂಲಕ ಸರ್ಕಾರ ಅಂಗನವಾಡಿಗಳನ್ನು ಮುಚ್ಚುವ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಸಿಐಟಿಯು ಸಂಯೋಜಿತ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತೆಯರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯ ಮುಂಭಾಗ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿಯ ಧರಣಿ ನಡೆಸುತ್ತಿದ್ದಾರೆ.

ಬೆಂಗಳೂರಿನ ಪ್ರೀಡಂ ಪಾರ್ಕ್, ವಿವಿಧ ಜಿಲ್ಲೆಗಳ ಸಚಿವರ ಮನೆಯಮುಂದೆ ಹಾಗೂ, ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಡಾ. ಶರಣಪ್ರಕಾಶ ಪಾಟೀಲ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರ ಮನೆ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ರಾಜ್ಯ ಸರಕಾರ ಪ್ರಸಕ್ತ ಸಾಲಿನಲ್ಲಿ ಸರಕಾರಿ ಪಬ್ಲಿಕ್‌ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಆದೇಶಿಸಿದ್ದು, ಈಗಾಗಲೇ ಪ್ರವೇಶ ಪ್ರಕ್ರಿಯೆ ನಡೆಯುತ್ತಿದೆ. ಇದರಿಂದ ಅಂಗನವಾಡಿ ಕೇಂದ್ರಗಳಿಗೆ ಬರಬೇಕಿದ್ದ ಫಲಾನುಭವಿ ಮಕ್ಕಳು ಸರಕಾರಿ ಪಬ್ಲಿಕ್‌ ಶಾಲೆಗಳಲ್ಲಿ ನೋಂದಾಯಿಸಿಕೊಳ್ಳುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳು ಮುಚ್ಚುವ ಆತಂಕದ ಸ್ಥಿತಿ ಇದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌ ವರಲಕ್ಷ್ಮಿ ಅಸಮಾಧಾನ ವ್ಯಕ್ತಪಡಿಸಿದರು.

ಕೆಕೆಆರ್‌ಡಿಬಿ ಅಡಿಯಲ್ಲಿ ಎಲ್‌ಕೆಜಿ, ಯುಕೆಜಿಯನ್ನು ಪ್ರಾರಂಭಿಸುವ ಆದೇಶ ಹಿಂಪಡೆದು, 1008 ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಅಲ್ಲಿಯೇ ಈ ತರಗತಿಗಳನ್ನು ಪ್ರಾರಂಭ ಮಾಡುವಂತೆ ಪ್ರತಿಭಟನೆಕಾರರು ಒತ್ತಾಯಿಸಿದರು.

ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಪ್ರತಿಭಟನಾ ಜಾಗಾಕ್ಕೆ ಭೇಟಿ ನೀಡಿ, ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಚ್‌ ಎಸ್‌ ಸುನಂದ, ಕಮಲಾ, ಯಮುನಾ ಗಾಂವ್ಕರ್‌ ಸೇರಿದಂತೆ ಅನೇಕರು ಇದ್ದರು.

 

Donate Janashakthi Media

Leave a Reply

Your email address will not be published. Required fields are marked *