ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನದಲ್ಲಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
100 ಕೋಟಿ ವಸೂಲಿ ಆರೋಪ ಸೇರಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ನವೆಂಬರ್ 2ರಂದು ಜಾರಿ ನಿರ್ದೇಶನಾಲಯ ಅನಿಲ್ ದೇಶ್‌ಮುಖ್ ಅವರನ್ನು ಬಂಧಿಸಿತ್ತು. ಅವರನ್ನು ಇಂದು ರಜಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನವೆಂಬರ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅನಿಲ್ ದೇಶ್‌ಮುಖ್ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದರು.
ಇದನ್ನು ಓದಿ: ಅಕ್ರಮ ಹಣ ವರ್ಗಾವಣೆ ಆರೋಪ: ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಬಂಧನ
100 ಕೋಟಿ ರೂಪಾಯಿ ವಸೂಲಿಗೆ ಸಂಬಂಧಿಸಿದಂತೆ ಪರಂಬೀರ್ ಸಿಂಗ್ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ 71 ವರ್ಷದ ಅನಿಲ್ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅನಿಲ್ ದೇಶಮುಖ್ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆದರೆ ಸಿಬಿಐ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ ನಂತರ ಏಪ್ರಿಲ್‌ನಲ್ಲಿ ತಮ್ಮ ಗೃಹ ಸಚಿವ ಸ್ಥಾನಕ್ಕೆ ಅನಿವಾರ್ಯವಾಗಿ ರಾಜೀನಾಮೆ ನೀಡಬೇಕಾಯಿತು.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಪಕ್ಷದ ಅನಿಲ್ ದೇಶಮುಖ್ ತಮ್ಮ ವಕೀಲರೊಂದಿಗೆ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಇಡಿ ಕಚೇರಿಗೆ ನವೆಂಬರ್ 1ರಂದು ಬೆಳಿಗ್ಗೆ ಹಾಜರಾಗಿದ್ದರು. ಇದಕ್ಕೂ ಮೊದಲು, ಐದು ಬಾರಿ ಸಮನ್ಸ್ ಜಾರಿ ಮಾಡಿದರೂ ಅವರು ಇಡಿ ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಕಳೆದ ವಾರ ಮುಂಬೈ ಹೈಕೋರ್ಟ್ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ನಂತರ ಅವರು ಇಡಿ ಮುಂದೆ ಹಾಜರಾಗಿದ್ದರು.