ಮಂಗಳೂರು: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು, ಇದರ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆನ್ನೆ ಅಪ್ರಾಪ್ತೆ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪವೊಂದು ಕೇಳಿಬಂದಿದೆ. ಸ್ವತಃ ಬಾಲಕಿಯೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದಾಳೆ.
ಬಂಟ್ವಾಳದ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಐದು ಮಂದಿ ಅಪಹರಿಸಿ ಆಕೆಗೆ ಮತ್ತು ಬರುವ ಚಾಕಲೇಟ್ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ: ಕೋಮುದ್ವೇಷ ರಾಜಕಾರಣದಿಂದ ಅತ್ಯಾಚಾರ-ಕೊಲೆ: ಜನವಾದಿ ಮಹಿಳಾ ಸಂಘಟನೆ ಆಕ್ರೋಶ
ಸದ್ಯ ಬಾಲಕಿಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಾನೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಸಂತ್ರಸ್ತೆ ನೀಡಿರುವ ದೂರಿನಂತೆ ಪರಿಚಿತ ಯುವಕನೊಬ್ಬ ಇತರ ನಾಲ್ವರೊಂದಿಗೆ ಕಾರಿನಲ್ಲಿ ಬಂದು ಅಪಹರಿಸಿದ್ದಾರೆ. ಬಿಳಿ ಕಾರಿನಲ್ಲಿ ಬಂದು ಶುಕ್ರವಾರ ಬೆಳಗ್ಗೆ 7 ಗಂಟೆಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಅಪಹರಿಸಿರುವ ಬಗ್ಗೆ ದೂರು ದಾಖಲಿಸಲಾಗಿದೆ.
ಐವರು ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 366(ಎ), 376(ಡಿ), 506 ಮತ್ತು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಪೊಲೀಸರು ಎರಡು ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದು, ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರು ತಲೆಮರೆಸಿಕೊಂಡಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ಕೃತ್ಯದ ಹೆಚ್ಚಿನ ವಿವರಗಳು ಲಭ್ಯವಾಗಲಿವೆ ಎಂಬ ಮಾಹಿತಿ ಇದೆ.