ವೆಲ್ಲಿಂಗ್ಟನ್: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಒಂದು ತಮಿಳುನಾಡಿನ ಕುನ್ನೂರಿನಲ್ಲಿ ಪತನಗೊಂಡಿದೆ. ದುರ್ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆಂದು ಪ್ರಾಥಮಿಕ ವರದಿ ತಿಳಿಸಿದೆ. ಗಾಯಗೊಂಡವರನ್ನು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಪಿನ್ ರಾವತ್ ಆರೋಗ್ಯ ಚಿಂತಾಜನಕವಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಲಿಕಾಪ್ಟರ್ ಪತನಗೊಂಡಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದರಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಒಳಗೊಂಡಂತೆ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು 9 ಸಿಬ್ಬಂದಿ ಪ್ರಯಾಣಿಸುತ್ತಿದ್ದರು.
ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದ್ದು, ಐಎಎಫ್-ಎಂಐ 12ವಿ5 ಸೇನಾ ವಿಮಾನದಲ್ಲಿ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಪತನಕ್ಕೆ ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.
ಹವಮಾನ ವೈಪರೀತ್ಯ ಹಿನ್ನೆಲೆ ಇಂಜಿನ್ ನಿಷ್ಕ್ರಿಯಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಊಟಿ ಸ್ಟಾಫ್ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮವನ್ನು ನೀಡುಲು ಬಿಪಿನ್ ರಾವತ್ ತೆರಳಿದ್ದರು. ನಂತರ ಇಲ್ಲಿಂದ ಸೂರೂರಿಗೆ ಹೋಗಿ ಅಲ್ಲಿಂದ ದೆಹಲಿಗೆ ಮರಳಬೇಕಿತ್ತು. ಯಾರನ್ನೆಲ್ಲಾ ಈವರೆಗೆ ರಕ್ಷಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಘಟನೆಯ ವಿವರಗಳು ತಿಳಿಯುತ್ತಿದ್ದಂತೆಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯಿಂದ ತಮಿಳುನಾಡಿನತ್ತ ಪ್ರಯಾಣ ಬೆಳೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತುರ್ತು ಸಚಿವ ಸಂಪುಟ ಸಭೆಯನ್ನೂ ಕರೆದಿದ್ದಾರೆ.
ಘಟನಾ ಸ್ಥಳದಲ್ಲಿ ಏಳು ಮೃತದೇಹಗಳು ಪತ್ತೆಯಾಗಿದ್ದು, ಯಾರದ್ದು ಎಂಬ ಮಾಹಿತಿ ತಿಳಿದು ಬಂದಿಲ್ಲ. ಘಟನೆಯಲ್ಲಿ ಗಾಯಗೊಂಡವರನ್ನು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾವತ್ ಅವರ ಪತ್ನಿ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆಂದು ಮೂಲಗಳು ತಿಳಿಸಿವೆ.