- ಕಳೆದ ಜೂನ್‌ನಲ್ಲಿ ಬಿಜೆಪಿ ಅಭ್ಯೃಥಿಯಾಗಿ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಗಸ್ತಿ
ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿರುವ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಲವು ಸಾಮಾಜಿಕ ಜಾಲತಾಣ ಹಾಗೂ ಖಾಸಗಿ ವಾಹಿನಿಗಳಲ್ಲಿ ನಿಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿದ್ದಾರೆ.
ಗಸ್ತಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರೂ ತಿಳಿಸಿದ್ದಾರೆ. ‘ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ರಾಯಚೂರು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.
‘ನಿಧನರಾಗಿದ್ದಾರೆ ಎನ್ನುವ ಸುದ್ದಿಯನ್ನು ದೃಢಪಡಿಸಿಕೊಳ್ಳುವುದಕ್ಕಾಗಿ ನೇರವಾಗಿ ಆಸ್ಪತ್ರೆಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ’ ಎಂದು ಹೇಳಿದರು.
ಕೋವಿಡ್ 19, ನ್ಯುಮೋನಿಯಾದಿಂದ ಬಳಲುತ್ತಿದ್ದ ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ಅವರನ್ನು ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಜೀವ ರಕ್ಷಕ ವ್ಯವಸ್ಥೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.