ಬೆಂಗಳೂರು : ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಏ.22ರಿಂದ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಅಕಾರಕ್ಕೆ ಬರಬೇಕು ಎಂಬ ಉದ್ದೇಶ ಹೊಂದಿದ್ದು,ವಿಧಾನಸಭೆ ಚುನಾವಣೆಯ ಬಳಿಕ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಜತೆಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಗೌಡರು ಪಕ್ಷದ ಪರ ಪ್ರಚಾರ ಕೈಗೊಂಡಿಲ್ಲ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಅವ ಮುಗಿದ ಬಳಿಕ ಗೌಡರು ಪ್ರಚಾರ ಪ್ರಾರಂಭಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಏ.13ರಿಂದ ಏ.20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಏ.21ರಂದು ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ಸಿಗೆ ಏ.24ರವರೆಗೆ ಕಾಲಾವಕಾಶವಿದೆ. ಹೀಗಾಗಿ ಏ.22ರಿಂದ ಗೌಡರು ಜೆಡಿಎಸ್ ಅಭ್ಯರ್ಥಿಗಳ ಪ್ರಚಾರ ಕೈಗೊಂಡು ಮತಯಾಚನೆ ಮಾಡಲಿದ್ದಾರೆ. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿರುವ ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಅಕಾರಕ್ಕೆ ಬರಬೇಕೆಂಬ ಉದ್ದೇಶ ಹೊಂದಿದೆ. ಹೀಗಾಗಿ ದೇವೇಗೌಡರು ಸಹ ವಿವಿಧ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಹಿರಂಗ ಸಮಾವೇಶಗಳಲ್ಲಿ ಪಾಲ್ಗೊಂಡು ಪ್ರಚಾರ ಕೈಗೊಳ್ಳಲಿದ್ದಾರೆ.
ಇದನ್ನೂ ಓದಿ : ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಧಾನಿಗೆ ಪತ್ರ ಬರೆದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ
ಚುನಾವಣಾ ಪ್ರಚಾರದ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ಪ್ರವಾಸದ ಕಾರ್ಯಕ್ರಮ ನಿಗದಿಯಾಗಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಜೆಡಿಎಸ್ ಪ್ರಬಲವಾಗಿರುವ ಹಳೇ ಮೈಸೂರು ಭಾಗದ ಮಂಡ್ಯ, ಹಾಸನ, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಗೌಡರು ಈಗಾಗಲೇ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ರಾಯಚೂರು, ವಿಜಯಪುರ ಜಿಲ್ಲೆಗಳಿಗೂ ಪ್ರಚಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.