ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರುಪಯೋಗ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಜುಲೈ 15 ರಂದು ಬಿಜೆಪಿ ಶಾಸಕರು ಶಾಸಕರ ಭವನದ ಮುಂಭಾಗ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಖಂಡಿಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯ ಎಲ್ಲಾ ಶಾಸಕರು ಶಾಸಕರ ಭವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಇಂದು ಧರಣಿ ನಡೆಸಿದರು.ಧರಣಿ ಮುಗಿಸಿ ಬಿಜೆಪಿ ಶಾಸಕರು ವಿಧಾನಸೌಧಕ್ಕೆ ಬರುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅದೇ ಸಮಯದಲ್ಲಿ ವಿಧಾನಸೌಧಕ್ಕೆ ಕಾರಿನಲ್ಲಿ ವಿಧಾನಸೌಧದ ಪಶ್ಚಿಮ ಗೇಟ್ ಬಳಿ ಆಗಮಿಸಿದಾಗ ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗಿದರು.ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಮುಖ್ಯಮಂತ್ರಿಗಳಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ.ಸದನ ಹೊರಗೆ ಇಂದು ಹೋರಾಟ ನಡೆಸಿರುವ ಬಿಜೆಪಿ ಸದನ ಒಳಗೂ ಹೋರಾಟ ನಡೆಸುವುದಾಗಿ ಹೇಳಿದೆ.
ಇದಕ್ಕೂ ಮೊದಲು ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಈ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ಈ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೂ ಈ ಹೋರಾಟ ನಿಲ್ಲದು ಎಂದು ಹೇಳಿದರು.ಪ್ರತಿಭಟನಾನಿರತ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಪ್ರತಿಭಟನೆ ಬಳಿಕ ಎಲ್ಲಾ ಶಾಸಕರು ವಿಧಾನ ಮಂಡಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ವಿಧಾನಸೌಧಕ್ಕೆ ತೆರಳಿದರು.