ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ. ಆದಾಯ
ತಮ್ಮ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ ಬಿಜೆಪಿ ಸರ್ಕಾರದ ಆದೇಶ ರದ್ದುಗೊಳಿಸುವಂತೆ ಕೋರಿ ಡಿ.ಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆಶಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆದಾಯ
ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಇಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಲ್ಲದೆ ರಿಟ್ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿ ಡಿಕೆ ಶಿವಕುಮಾರ್ ಪರ ವಕೀಲರು ಲಿಖಿತ ಮೆಮೊ ಸಲ್ಲಿಸಿದರು. ಮೆಮೊ ಮಾನ್ಯ ಮಾಡಿದ ಹೈಕೋರ್ಟ್ ವಿಭಾಗೀಯ ಪೀಠ, ಮೇಲ್ಮನವಿ ಹಿಂಪಡೆಯುವುದಕ್ಕೆ ಅನುಮತಿ ನೀಡಿದೆ.
ಈ ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಯಲ್ಲಿ ಮಧ್ಯಪ್ರವೇಶಿಸಲು ತಮಗೆ ಅನುಮತಿ ನೀಡಬೇಕು. ರಾಜ್ಯ ಸಚಿವ ಸಂಪುಟದ ನಿರ್ಣಯಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಬೇಕು ಎಂದು ಅರ್ಜಿಯಲ್ಲಿ ಯತ್ನಾಳ್ ರವರು ಮನವಿ ಮಾಡಿದ್ದರು.
ಇದನ್ನೂ ಓದಿ: ಕರ್ನಾಟಕದ ಗ್ಯಾರಂಟಿ ಅಲೆ ತೆಲಂಗಾಣದಲ್ಲೂ ಬಿಸುತ್ತಿದೆ: ಸಿಎಂ ಸಿದ್ದರಾಮಯ್ಯ
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು “ನನ್ನ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್‌ಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.
“ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ ಅಷ್ಟೇ. ಅದೇ ಕಾರಣಕ್ಕೆ ನನಗೆ ತೊಂದರೆ ನೀಡಿದ್ದಾರೆ ಅದರ ಪರಿಣಾಮ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ” ಎಂದು ಹೇಳಿದ್ದಾರೆ.
ಈ ಸಮಯದಲ್ಲಿ ಯಾರು ಏನು ಮಾತನಾಡಿದ್ದಾರೆ ಎಂಬುದನ್ನು ಗಮನಿಸಿದ್ದೇನೆ, ಎಲ್ಲರಿಗೂ ಒಳ್ಳೆಯದಾಗಲಿ. ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಿಡಿಯೋ ನೋಡಿ: ರಾಜ್ಯದಲ್ಲಿ ಸರ್ಕಾರ ಬದಲಾಗಿದೆ, ನಿಲುವುಗಳಲ್ಲಿ ಬದಲಾವಣೆ ಇಲ್ಲ – ಬಿ.ಸುರೇಶ್ Janashakthi Media