ನೋಯ್ಡಾ: ನೋಯ್ಡಾ ಸೆಕ್ಟರ್-21ರಲ್ಲಿ ಬಹುಮಹಡಿ ಕಟ್ಟಡದ ನಿರ್ಮಾಣ ಹಂತದ ಗೋಡೆಯೊಂದು ಕುಸಿದು ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಜಲವಾಯು ವಿಹಾರ್ ಬಳಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ವಿವರಿಸಿರುವ ಪೊಲೀಸ್ ಅಧಿಕಾರಿ ‘ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸೇರಿದಂತೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಸ್ಥಳದಲ್ಲಿದ್ದಾರೆ’ ಎಂದರು.
ನೋಯ್ಡಾ ಜಿಲ್ಲಾಧಿಕಾರಿ ಸುಹಾಸ್ ಎಲ್.ವೈ ಮಾತನಾಡಿ ‘ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಗುರುತಿಸಲಾಗಿದೆ. ನೋಯ್ಡಾ ಪ್ರಾಧಿಕಾರ ಒಳಚರಂಡಿ ದುರಸ್ತಿ ಕಾಮಗಾರಿಯ ಗುತ್ತಿಗೆ ನೀಡಿತ್ತು. ಹೀಗಾಗಿ ಕಾರ್ಮಿಕರು ಇಟ್ಟಿಗೆಗಳನ್ನು ಹೊರ ತೆಗೆಯುವಾಗ ಗೋಡೆ ಕುಸಿದಿದೆ ಎಂದು ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ತನಿಖೆ ಮಾಡಲಾಗುತ್ತದೆ. ಜಿಲ್ಲಾ ಆಸ್ಪತ್ರೆ ಮತ್ತು ಕೈಲಾಶ್ ಆಸ್ಪತ್ರೆಯಲ್ಲಿ ತಲಾ ಇಬ್ಬರು ಸಾವಿಗೀಡಾಗಿರುವುದು ವರದಿಯಾಗಿದೆ’ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.