ಬೆಂಗಳೂರು: ಬಮೂಲ್ನ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಸರ್ಕಾರವು ತನಿಖೆಗೆ ಆದೇಶಿಸಿದೆ.
ಈ ಬಗ್ಗೆ ಸಂಸದ ಡಿ.ಕೆ. ಸುರೇಶ್ ಜನವರಿ 21ರಂದು ಸಹಕಾರ ಸಚಿವರಿಗೆ ಪತ್ರ ಬರೆದು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಬಮೂಲ್ನ 297 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. 27,259 ಮಂದಿ ಅರ್ಜಿ ಸಲ್ಲಿಸಿದ್ದರು. ಕಳೆದ ಡಿಸೆಂಬರ್ 12ರಂದು ಲಿಖಿತ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ ಹಲವು ಅಕ್ರಮಗಳು ನಡೆದಿದೆ ಎಂದು ಪತ್ರ ಬರೆದಿದ್ದರು.
ಈ ಬಗ್ಗೆ ಪರೀಕ್ಷೆಯ ಸಂದರ್ಭದಲ್ಲಿ ಅನರ್ಹ ಹಾಗೂ ಬಲಿಷ್ಠ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. 15-25 ಲಕ್ಷ ರೂಪಾಯಿಗಳ ವರೆಗೂ ಹಣ ಪಡೆಯಲಾಗಿದೆ. ಓಎಂಆರ್ ಶೀಟ್ನಲ್ಲಿ ವ್ಯತ್ಯಾಸವಿದೆ. ಈ ಬಗ್ಗೆ ತನಿಖೆ ನಡೆಸುವಂತೆಯೂ ಮನವಿ ಮಾಡಿದ್ದರು.
ಸಂಸದರ ಪತ್ರ ಆಧರಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಜನವರಿ 27ರಂದು ಪತ್ರ ಬರೆದು ಸಹಕಾರ ಇಲಾಖೆಯ ಜಂಟಿ ನಿಬಂಧಕರಾದ ಪ್ರಸಾದ್ ರೆಡ್ಡಿ ಅವರಿಂದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು.
ಅದರಂತೆ ತನಿಖೆಗೆ ಆದೇಶಿಸಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿವಿಧ ಹುದ್ದೆಗಳ ನೇಮಕಾತಿಗೆ ಬರೆದಿರುವ ಲಿಖಿತ ಪರೀಕ್ಷೆಯಲ್ಲೂ ಅವ್ಯವಹಾರ ನಡೆದಿದೆ ಮತ್ತು ಈ ಮೂಲಕ ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಸದ್ದು ಮಾಡುತ್ತಿದೆ.
ಈಗಾಗಲೇ ಕೆಪಿಎಸ್ಸಿ ನೇಮಕಾತಿ, ಪಿಐಎಸ್ ನೇಮಕಾತಿ ಹಗರಗಣಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಮೂಲ್ ನೇಮಕಾತಿಯಲ್ಲೂ ಅವ್ಯವಹಾರ ನಡೆದಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ
ಬೀದರ್ ಪ್ರವಾಸದಲ್ಲಿರುವ ಜೆಡಿಎಸ್ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಭ್ರಷ್ಟಾಚಾರ ಹಾಗೂ ಅಕ್ರಮಗಳ ಬಗ್ಗೆ ಸುದ್ದಿಗಾರರರೊಂದಿಗೆ ಮಾತನಾಡುತ್ತಾ, ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ನೇಮಕಾತಿ ಪಾರದರ್ಶಕವಾಗಿ ನಡೆಯುತ್ತಿಲ್ಲ. ಅಲ್ಲಿ ಒಂದೊಂದು ಹುದ್ದೆಯ ನೇಮಕ 25 ರಿಂದ 50 ಲಕ್ಷ ರೂಪಾಯಿವರೆಗೆ ಲಂಚವನ್ನು ನಿಗದಿ ಮಾಡಲಾಗಿದೆ. ಇದು ಎಲ್ಲ ಜಿಲ್ಲೆಗಳ ಹಾಲು ಒಕ್ಕೂಟಗಳಲ್ಲೂ ನಡೆಯುತ್ತಿದೆ. ಈ ಮಾಹಿತಿ ನನಗೆ ಮಾತ್ರವಲ್ಲದೆ, ಈವರೆಗೆ ಆಡಳಿತ ನಡೆಸಿದ, ಈಗ ನಡೆಸುತ್ತಿರುವ ಪ್ರತಿಯೊಬ್ಬರಿಗೂ ಗೊತ್ತಿದೆ ಎಂದಿದ್ದಾರೆ.