ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಸಿಎಂಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 14,564 ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ವಿಶ್ವವಿದ್ಯಾಲಯಗಳ ಯುಜಿಸಿ ನಿಯಮಾನುಸಾರ ಅತಿಥಿ ಉಪನ್ಯಾಸಕರು ವಿದ್ಯಾರ್ಹತೆಯನ್ನು ಹೊಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅತಿ ಕಡಿಮೆ ವೇತನ ಮತ್ತು ಸೇವಾ ಭದ್ರತೆ ಇಲ್ಲದೆ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಂಕಷ್ಟದಲ್ಲಿರುವ ರಾಜ್ಯದ ಅನೇಕ ಅತಿಥಿ ಉಪನ್ಯಾಸಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಲ್ಲಾ ವಿದ್ಯಾರ್ಹತೆ, ಅನೇಕ ವರ್ಷಗಳ ಸೇವಾನುಭವ ಇದ್ದರೂ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಇಲ್ಲವಾಗಿದೆ.

ವಯೋಮಿತಿ ಮೀರುತ್ತಿರುವ ಕಾರಣ ಅನೇಕರು ಅಭದ್ರತೆಯಲ್ಲಿ ಸಿಲುಕಿದ್ದಾರೆ. ಹೀಗಾಗಿ ಮಾನವೀಯತೆ ಆಧಾರದಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು. 1982, 1992, 1996 ಮತ್ತು 2003 ರಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಲಾಗಿದ್ದು, ಅದೇ ಮಾದರಿಯಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪತ್ರ ಬರೆಯಲಾಗಿದೆ.

Donate Janashakthi Media

Leave a Reply

Your email address will not be published. Required fields are marked *