ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹರೀಶಕುಮಾರ್.ಕೆ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ನೀಡಿದರು. ʼಕರಿʼ ದಿನದಂದು ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು, ಸತೀಶ ಜಾರಕಿಹೊಳಿ ಮೂಢನಂಬಿಕೆ ವಿರೋಧಿಸಿ ಸ್ಮಶಾನದಲ್ಲಿ ಅಮಾವಾಸ್ಯೆ ರಾತ್ರಿ ಊಟ ಮಾಡಿದ್ದರು. ಈ ಬಾರಿಯೂ ನಾಮಪತ್ರ ಸಲ್ಲಿಸುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲ ಘಳಿಗೆಗಳು ಒಳ್ಳೆಯದೇ, ಯಾವುದೂ ಕೆಟ್ಟದಿಲ್ಲ. ಕೆಟ್ಟ ಘಳಿಗೆ ಅನ್ನೋದು ವ್ಯವಸ್ಥೆಯಲ್ಲಿ ಇಲ್ಲ. ಒಳ್ಳೆಯದು ಮಾಡಿದರೆ ಒಳ್ಳೆಯದು, ಕೆಟ್ಟದು ಮಾಡಿದರೆ ಕೆಟ್ಟದ್ದು ಎಂದು ಮೂಡನಂಬಿಕೆಗೆ ಬ್ರೆಕ್ ಹಾಕಿದ್ದಾರೆ.
ನಾಮಪತ್ರ ಸಲ್ಲಿಸುವ ಮುಂಚೆ ಬೆಳಗಾವಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್, ಜಮೀರ್ ಅಹಮದ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್ ಮತ್ತಿತರರು ಭಾಗವಹಿಸಿದ್ದರು.
ಬಿಜೆಪಿಯ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ಬೆಳಗಾವಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಏಪ್ರಿಲ್ 17ರಂದು ಈ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಮೇ.2 ರಂದು ಫಲಿತಾಂಶ ಪ್ರಕಟವಾಗಲಿದೆ.
ಬಿಜೆಪಿ ಪಕ್ಷವೂ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು ಸುರೇಶ್ ಅಂಗಡಿ ಅವರ ಪತ್ನಿ ಮಂಗಳ ಅವರನ್ನು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೇಸ್ ಪಕ್ಷ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲೇ ಜಿಡಿಎಸ್ ಚುನಾವಣಾ ಕಣದಿಂದ ದೂರ ಸರಿದಿದ್ದು ಕೂತುಹಲವನ್ನು ಹೆಚ್ಚಿಸಿದೆ.