ಬೆಂಗಳೂರು :ಧಾರಾಕಾರ ಮಳೆಯ ಪರಿಣಾಮ ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿರುವ ಘಟನೆ ಜರುಗಿದೆ.
ಕಟ್ಟಡ ಅವಶೇಷಗಳಡಿ 16 ಮಂದಿ ಕಾರ್ಮಿಕರು ಸಿಲುಕಿರಬಹುದು ಎಂದು ಮಾಧ್ಯಮಗಳಿಗೆ ಪೊಲೀಸ್ ಮೂಲಗಳಿಂದ ತಿಳಿದುಬಂದಿದ್ದು, ಸದ್ಯ ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆದಿದ್ದಾರೆ. ಇನ್ನು ಮೂವರನ್ನು ರಕ್ಷಣೆ ಮಾಡಿದ್ದು, ಇನ್ನುಳಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಟ್ಟಡ ಕುಸಿಯುತ್ತಿದ್ದಂತೆಯೇ ಅವಶೇಷಗಳಡಿಯಲ್ಲಿ ಸಿಲುಕಿದ್ದ ಕಾರ್ಮಿಕನೋರ್ವ ರಕ್ತ ಸಿಕ್ತ ಸ್ಥಿತಿಯಲ್ಲಿ ಆಚೆ ಬಂದಿದ್ದು, ಕಾರ್ಮಿಕನ ತಲೆಗೆ ಪೆಟ್ಟಾಗಿ ರಕ್ತ ಸೋರುತ್ತಿದೆ. ಇನ್ನು ರಕ್ತದ ಮಡುವಿನಲ್ಲೇ ಅಳುತ್ತ ನಮ್ಮವರು ಒಳಗೆ ಸಿಲುಕಿದ್ದಾರೆಂದು ಎಂದು ಮಾಹಿತಿ ನೀಡಿದ್ದಾನೆ. ಒಳಗೆ ಇನ್ನು ಕಾರ್ಮಿಕರು ಇದ್ದಾರೆ ಎನ್ನುವುದು ಖಚಿತವಾಗುತ್ತಿದ್ದಂತೆಯೇ ರಕ್ಷಣಾ ಕಾರ್ಯಚರಣೆ ಚುರುಕುಗೊಂಡಿದೆ.
ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರ ಕಾರ್ಮಿಕ ಶವ ಪತ್ತೆಯಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿಸಿಪಿ ದೇವರಾಜ್ ಅವರಿಗೆ ಫೋನ್ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ 17 ಜನ ಸಿಲುಕಿರುವ ಬಗ್ಗೆ ಮಾಹಿತಿ ಇದೆ ಇದೆ ಎಂದು ಡಿಸಿಪಿ ದೇವರಾಜ್ ಸಿಎಂ, ಡಿಸಿಎಂಗೆ ಮಾಹಿತಿ ನೀಡಿದ್ದಾರೆ.