ರಾಮನಗರ: ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಹಳ್ಳಿ ಗ್ರಾಮದ ಯುವತಿಯ ಅಸಹಜ ಸಾವನ್ನು ಖಂಡಿಸಿ ಹಾಗೂ ನಿಷ್ಪಕ್ಷಪಾತ ತನಿಖೆ ಮಾಡಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಇಂದು ಕುದೂರು ಟೌನ್ ನ ಬಸ್ ನಿಲ್ದಾಣದ ಬಳಿ ದಲಿತ ಹಕ್ಕುಗಳ ಸಮಿತಿ (ಡಿ.ಹೆಚ್.ಎಸ್) ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ (ಜೆ.ಎಂ.ಎಸ್) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ಸಮಿತಿಯ ಚಿಕ್ಕರಾಜು.ಎಸ್ ಅವರು ಅಸಹಜ ಸಾವಿನ ಸುತ್ತ ಹಲವು ಅನುಮಾನಗಳಿವೆ, ಈಗಾಗಲೇ ರಾಜ್ಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಆಯಾಮಗಳಲ್ಲಿ ಪ್ರಕರಣದ ಕುರಿತು ಗೊಂದಲಗಳು ಸೃಷ್ಟಿಯಾಗಿವೆ. ಕೂಡಲೇ ಜಿಲ್ಲಾಡಳಿತ ಈ ಕುರಿತು ಗೊಂದಲವನ್ನು ಸರಿಪಡಿಸಬೇಕು ಎಂದು ಹೇಳಿದರು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಕೆ.ಎಸ್.ಲಕ್ಷ್ಮಿ ರವರು ಮಾತನಾಡುತ್ತಾ ಈ ಕೃತ್ಯ ಅತ್ಯಂತ ಅಮಾನವೀಯ, ಅನ ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ. ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡುವುದರ ಜೊತೆಗೆ ನಿರ್ದಿಷ್ಟ ಕಾಲಮಿತಿಯೊಳಗೆ ಯುವತಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.
ಎಸ್.ವನಜಾರವರು ಮಾತನಾಡುತ್ತಾ ದೇಶವ್ಯಾಪಿ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚುತ್ತಿರುವುದು ಮಹಿಳೆಯರ ಅಸುರಕ್ಷತೆಗೆ ಹಿಡಿದ ಕನ್ನಡಿಯಾಗಿದೆ, ತನಿಖೆ ನ್ಯಾಯಯುತವಾಗಿರಬೇಕು ಹಾಗೂ ಪಾರದರ್ಶಕವಾಗಿರಬೇಕು ಎಂದರು. ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಕ್ರಮವಹಿಸಬೇಕೆಂದು ಒತ್ತಾಯಿಸಿದರು.
ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿ ಅಪರಾಧಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಮನವಿಯನ್ನು ಮಾನ್ಯ ಕುದೂರು ಪೊಲೀಸ್ ಠಾಣಾಧಿಕಾರಿಗಳ ಮೂಲಕ ಮಾನ್ಯ ಜಿಲ್ಲಾಧಿಕಾರಿ ಅವರಿಗೆ, ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ , ಮಾನ್ಯ ಅಧ್ಯಕ್ಷರು,ರಾಜ್ಯ ಮಹಿಳಾ ಆಯೋಗ ಮತ್ತು ಮಾನ್ಯ ಅಧ್ಯಕ್ಷರು, ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮುಖಂಡರಾದ ಹನುಮಂತರಾಜು, ಶಾಂತಮ್ಮ, ಲಕ್ಷ್ಮಣ, ಹನುಮಂತಪ್ಪ, ಶ್ರೀನಿವಾಸ್ , ಚಲುವರಾಜು ಇತರರು ಇದ್ದರು.