ಉತ್ತಮ ಪ್ರತಿಕ್ರಿಯೆಯೊಂದಿಗೆ ಆರಂಭಗೊಂಡಿದೆ ‘ಭಾರತ್ ಬಂದ್’

ಬೆಂಗಳೂರು : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ‘ಭಾರತ್ ಬಂದ್‌’ ಆರಂಭವಾಗಿದೆ. ಕರ್ನಾಟಕದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ಬಂದ್ ಗೆ ಉತ್ತಮ‌ ಬೆಂಬಲ ವ್ಯಕ್ತವಾಗುತ್ತಿದೆ.

ಉಡುಪಿಯಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನ ಜಾಥ ಹಮ್ಮಿಕೊಂಡಿವೆ. ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಸಮಾನ ಮನಸ್ಕ ಜನಪರ ಸಂಘಟನೆಗಳೊಂದಿಗೆ ಕೂಡಿಕೊಂಡು ಉಡುಪಿ, ಕುಂದಾಪುರ, ಬೈಂದೂರು, ಕಾರ್ಕಳದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಉಡುಪಿಯಲ್ಲಿ ಜೋಡುಕಟ್ಟೆಯಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ ಕೆ. ಶಂಕರ್‌ ತಿಳಿಸಿದ್ದಾರೆ.

ದಾವಣಗೆರೆಯಲ್ಲೂ ಭಾರತ್ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಗರದಲ್ಲಿ ಬಸ್ ಸಂಚಾರ ತಡೆಯಲು ಮುಂದಾಗಿದ್ದ ಮೂವರನ್ನ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಮಿಕರ ಸಂಘಟನೆಯ, ಯುವಜನ ಸಂಘಟನೆ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಗಾವಿಯಲ್ಲಿ ಧರಣಿ ನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ತಡೆದು ಕಾಂಗ್ರೆಸ್ ಕಿಸಾನ್ ಮೋರ್ಚಾ ಕಾರ್ಯಕರ್ತರು ಧರಣಿ ನಡೆಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು -ಪುಣೆ ಹೆದ್ದಾರಿ ತಡೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಭಾರತ ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ. ಕಾರ್ಮಿಕ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ರೈತ ಸಂಘದ ಕಾರ್ಯಕರ್ತರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹಾಸನದಲ್ಲಿ ಅಂಗಡಿ ಹೋಟೆಲ್ ಗಳನ್ನು ಧರಣಿನಿರತರು ಮುಚ್ಚಿಸಿದ್ದಾರೆ. ಸ್ವಯಂ ಪ್ರೇರಿತರಾಗಿ ಅಂಗಡಿ, ಹೋಟೆಲ್
ಬಂದ್ ಮಾಡುವಂತೆ ಮನವಿ ಮಾಡಲಾಗುತ್ತಿದೆ. ಭಾರತ ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.

ಕೋಲಾರದಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ ಹಿನ್ನೆಲೆ ಜಿಲ್ಲೆಯಲ್ಲಿ ರೈತ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿದ್ದು ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ತಳ್ಳುವ ಬಂಡಿಯಲ್ಲಿ ದಿನಸಿ, ತರಕಾರಿ ಹಾಗೂ ರಾಗಿ ಬೆಳೆಯನ್ನು ಸಾಗಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಅಂಬಾನಿ, ಅದಾನಿ ಫೋಟೋ ಪ್ರದರ್ಶನ ಮಾಡಿ ಕೈಯಲ್ಲಿ ಪಂಜು ಹಿಡಿದು ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಗ್ರಾಮಾಂತರ ಭಾಗದ ಬಸ್ ಸಂಚಾರಕ್ಕೆ ತಡೆ ನೀಡಲಾಗಿದೆ. ಪ್ರತಿಭಟನೆ ನಿರತರು ಕೆಎಸ್‌ಆರ್ಟಿಸಿ ಬಸ್ ಸಂಚಾರಕ್ಕೆ ತಡೆಯೊಡ್ಡಿದ್ದಾರೆ. ಭಾರತ ಬಂದ್ ಗೆ ಬೆಂಬಲಿಸುವಂತೆ ಕೋರಿ ಬಸ್ ಸಂಚಾರಕ್ಕೆ ತಡೆಯೊಡ್ಡಿದ್ದು, ಬಸ್ ಟಿಕೆಟ್ ಹಣವನ್ನು ಪ್ರಯಾಣಿಕರಿಗೆ ವಾಪಸ್ ಕೊಡಲಾಗಿದೆ.

ಕೊಪ್ಪಳದಲ್ಲಿ ಹೋಟೆಲ್ ಮುಚ್ಚಿಸಲು ಪ್ರಯತ್ನ ನಡೆಸಲಾಗಿದೆ. ನಿಮಗೆ ಅನ್ನ ನೀಡುತ್ತಿರುವ ರೈತರು ಸಂಕಷ್ಟದಲ್ಲಿದ್ದಾರೆ ಅನ್ನದಾತರ ಹೋರಾಟಕ್ಕೆ ಬೆಂಬಲಿಸಿ ಎಂದು ಮನವಿ ಮಾಡಲಾಗಿದೆ.

ಭಾರತ್ ಬಂದ್ ಬೆಂಬಲಿಸಿ ಹೊಸಕೋಟೆಯಲ್ಲಿ ಧರಣಿ ನಡೆಸಲಾಗಿದೆ. ಕೆಪಿಸಿಸಿ ಕಿಸಾನ್ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಗಿದ್ದು, ಟೈಯರ್ ಗೆ ಬೆಂಕಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲ್ಬುರ್ಗಿಯಲ್ಲಿ ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಕಂಗಾಲಾಗಿದ್ದಾರೆ. ಬಂದ್ ನಿಂದಾಗಿ ಬಸ್ ಸಂಚಾರ ಸ್ಥಗಿತವಾಗಿದ್ದು, ಗಂಟುಮೂಟೆ ಸಮೇತ ಬಸ್ ನಿಲ್ದಾಣದಿಂದ ಪ್ರಯಾಣಿಕರು ಕಾಲ್ನಡಿಗೆಯಲ್ಲಿ ತೆರಳಿದ್ದಾರೆ.

ಶಿವಮೊಗ್ಗದ ಬಸ್ ನಿಲ್ದಾಣ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದ್ದಾರೆ. ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಬೇಕು, ಬೆಲೆ ಏರಿಕೆ ತಡೆಯಬೇಕೆಂದು ಒತ್ತಾಯಿಸಿದ್ದಾರೆ.

ಬಂದ್ ನಡುವೆ ಪರೀಕ್ಷೆ: ದಾವಣಗೆರೆ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಉಪಕುಲಪತಿ ಪ್ರೊ. ಶರಣಪ್ಪ ಹಲಸೇ ತಿಳಿಸಿದ್ದಾರೆ. ಪರೀಕ್ಷೆಯನ್ನು ಮುಂದೂಡುವುದಿಲ್ಲ. ಇಂದು ನಿಗದಿಯಾಗಿದ್ದ ವಿವಿಯ ಎಲ್ಲ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಲಾಗಿದೆ

ಕೊರೋನಾ ನಡುವೆಯೂ ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ನಡೆಸಲಾಗುವುದು. ಇಂದು ಮತ್ತು ನಾಡಿದ್ದು ಪೂರಕ ಪರೀಕ್ಷೆ ನಿಗದಿಯಾಗಿದೆ. ಉಳಿದಂತೆ ಕೆಲವು ವಿವಿ ಪರೀಕ್ಷೆ ಮುಂದೂಡಿದ್ದು, ಮತ್ತೆ ಕೆಲವು ವಿವಿ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ.

 

Donate Janashakthi Media

Leave a Reply

Your email address will not be published. Required fields are marked *