ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನ ಗೆದ್ದ ತಿಂಗಳೊಳಗೆ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸುತ್ತೇವೆ – ಬೊಮ್ಮಾಯಿ

ಕೋಲಾರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆದ್ದರೆ ಒಂದು ತಿಂಗಳೊಳಗೆ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ನೀಡಿದ ಐದು ಗ್ಯಾರೆಂಟಿಗಳಿಗೆ ವಿರುದ್ಧವಾಗಿ ಇದು ಬಿಜೆಪಿಯ ಏಕೈಕ ಗ್ಯಾರೆಂಟಿಯಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಅನ್ನಭಾಗ್ಯ’ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಮಾತನಾಡುತ್ತದೆ ಆದರೆ ರಾಜ್ಯದ ರೈತರ ಸಂಕಷ್ಟಗಳ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪರವಾನಿಗೆ ಉಲ್ಲಂಘಸಿ ಹಾರಿಸಿದ್ದ ಕೇಸರಿ ಧ್ವಜ ತೆರವು ಮಾಡಿದ ಜಿಲ್ಲಾಡಳಿತ

“ಕಾಂಗ್ರೆಸ್ ಐದು ಗ್ಯಾರೆಂಟಿಗಳ ಬಗ್ಗೆ ಹೇಳುತ್ತಾ 2023 ರ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲು ಪ್ರತಿ ಬಡ ಕುಟುಂಬಕ್ಕೆ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು  ಭರವಸೆ ನೀಡಿತ್ತು. ಆದರೆ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ವಿತರಿಸುತ್ತಿರುವ ಐದು ಕೆಜಿ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇದು ರಾಜ್ಯ ಸರ್ಕಾರ ಜನರಿಗೆ ಮಾಡಿದ ದೊಡ್ಡ ವಂಚನೆಯಾಗಿದೆ” ಎಂದು ಬೊಮ್ಮಾಯಿ ಹೇಳಿದ್ದಾರೆ.

“ಯಾವುದೇ ಹೊಸ ಪಡಿತರ ಚೀಟಿಗಳನ್ನು ವಿತರಿಸಲಾಗಿಲ್ಲ. ಪಡಿತರ ಚೀಟಿ ಇಲ್ಲದೆ ಜನರಿಗೆ ಗೃಹ ಲಕ್ಷ್ಮಿ ಯೋಜನೆಯ ಪ್ರಯೋಜನಗಳು ಸಿಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಸರಕಾರ ಪ್ರತಿ ಬಡ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ, ಆದರೆ ಪ್ರತಿ ತಿಂಗಳು ಇಷ್ಟು ಪ್ರಮಾಣದ ಉಚಿತ ವಿದ್ಯುತ್ ಸಿಗುತ್ತಿದೆ ಎಂಬುದಕ್ಕೆ ಕನಿಷ್ಠ ಒಬ್ಬ ವ್ಯಕ್ತಿಯ ಪುರಾವೆ ನೀಡಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಕೆರೆಗೋಡು ಧ್ವಜ ವಿವಾದ ; ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ, ಹಲವರು ವಶಕ್ಕೆ

”ಮದ್ಯ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಈ ಹಣದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಸೀಟು ಇಲ್ಲ. ಹಿಂದಿನ ಬಿಜೆಪಿ ಸರ್ಕಾರ ಮಂಡಿಸಿದ ಹೆಚ್ಚುವರಿ ಬಜೆಟ್‌ಗೆ ವಿರುದ್ಧವಾಗಿ ರಾಜ್ಯ (ಕಾಂಗ್ರೆಸ್) ಸರ್ಕಾರ ದಿವಾಳಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ 8 ಸಾವಿರ ಕೋಟಿ ಹೆಚ್ಚುವರಿ ಸಾಲ ಮಾಡಿತ್ತು. ಈಗ ಕರ್ನಾಟಕದ ಪ್ರತಿಯೊಬ್ಬ ಪ್ರಜೆಗೂ ಒಂದು ಲಕ್ಷ ಸಾಲವಿದೆ. ಸರ್ಕಾರಿ ಹುದ್ದೆಗಳನ್ನೂ ಹರಾಜು ಹಾಕಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಆ ಹುದ್ದೆಗಳಿಗೆ ಲಾಬಿ ಮಾಡಿ ಪೊಲೀಸರು ಕಮಿಷನ್ ಪಡೆಯುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ವಿಡಿಯೊ ನೋಡಿ: ಕಾಂತರಾಜ ವರದಿ ಸ್ವೀಕರಿಸುತ್ತೇವೆ – ಸಿಎಂ ಸಿದ್ದರಾಮಯ್ಯ ವಾಗ್ದಾನ Janashakthi Media

Donate Janashakthi Media

Leave a Reply

Your email address will not be published. Required fields are marked *