ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಕಟಿಸಿದ್ದ 44 ಅಭ್ಯರ್ಥಿಗಳ ಪಟ್ಟಿಯನ್ನು ಕೆಲವೇ ಗಂಟೆಯಲ್ಲಿ ವಾಪಸ್ ಪಡೆದಿದೆ.
ಜಮ್ಮು ಕಾಶ್ಮೀರದ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಸೋಮವಾರ ಬೆಳಿಗ್ಗೆ ಬಿಜೆಪಿ 44 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಪಟ್ಟಿಯನ್ನು ವಾಪಸ್ ಪಡೆದ ಬಿಜೆಪಿ ನಂತರ ಕೇವಲ 15 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಸೆಪ್ಟೆಂಬರ್ 18ರಿಂದ 25 ಹಾಗೂ ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ.
ಭಾನುವಾರ ದೆಹಲಿಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೇಂದ್ರ ಚುನಾವಣೆ ಸಮಿತಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು. ಆದರೆ ಇದೀಗ ಪಟ್ಟಿಯನ್ನು ಹಿಂಪಡೆದಿದೆ ಮತ್ತು ಪರಿಷ್ಕೃತ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.