ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್ ಆಯೋಜಿಸಿರುವ ಜಂಟಿ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು.
ನಗರದ ಕೆಂಗೇರಿ ಜೆ ಕೆ ಗ್ರಾಂಡ್ ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾದರು. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವರಾದ ವಿ ಸೋಮಣ್ಣ, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ, ಜಿಟಿ ದೇವೇಗೌಡ, ಡಿವಿ ಸದಾನಂದ ಗೌಡ, ನಿಖಿಲ್ ಕುಮಾರಸ್ವಾಮಿ, ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಕಾಂಗ್ರೆಸ್ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿ ಎಸ್ ಜಂಟಿ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಟೌಟ್ ಗಳು ಎಲ್ಲೆಲ್ಲೂ ರಾರಾಜಿಸುತ್ತಿದೆ. ಕುತೂಹಲ ಏನಂದರೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಫೋಟೋಗಳು ಮಾತ್ರ ಕಟೌಟ್ ಗಳಲ್ಲಿ ಹೆಚ್ಚಾಗಿ ಕಂಡು ಬಂದಿಲ್ಲ.
ಪಾದಯಾತ್ರೆ ಎಲ್ಲಿ, ಎಷ್ಟು ದಿನ: ಇಂದಿನಿಂದ ಆಗಸ್ಟ್ 10ರವರೆಗೆ 140 ಕಿಮೀ ಪಾದಯಾತ್ರೆ ಇದಾಗಿದೆ. ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ. ಆಗಸ್ಟ್ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ.