ಬೆಂಗಳೂರು: ಮಂಗಳವಾರ ನಡೆಯಲಿರುವ ಪ್ರತಿಭಟನೆಗಾಗಿ ದೆಹಲಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕರ್ನಾಟಕದ ಸುಮಾರು 100 ರೈತರನ್ನು ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸೋಮವಾರ ರಾತ್ರಿ ಬಂಧಿಸಲಾಗಿದೆ. ರಾತ್ರಿ ಹೊತ್ತು ರೈಲಿನಲ್ಲಿ ಮಲಗಿದ್ದ ರೈತರನ್ನು ಪೊಲೀಸರು ಗೂಂಡಾಗಳ ರೀತಿಯಲ್ಲಿ ಎಳೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ವೇಳೆ ಮಹಿಳಾ ಹೋರಾಟಗಾರ್ತಿಯೊಬ್ಬರಿಗೆ ಗಾಯಗಳಾಗಿವೆ ಎಂದು ರೈತ ಸಂಘಟನೆ ಮುಖಂಡರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರೈತ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದು, ಬಂಧಿಸಲಾದ ರಾಜ್ಯದ ಎಲ್ಲಾ ರೈತರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಜನಶಕ್ತಿ ಮೀಡಿಯಾ ಜೊತೆಗೆ ಮಾತನಾಡಿದ ರೈತ ನಾಯಕ ಕುರುಬೂರು ಶಾಂತಕುಮಾರ್ ಅವರು, “ನಮ್ಮ ರೈತರನ್ನು ರಾತ್ರಿ 2 ಗಂಟೆ ಹೊತ್ತಿಗೆ ಭೋಪಾಲ್‌ನಲ್ಲಿ ಬಂಧಿಸಲಾಗಿದೆ. ರೈಲಿನಲ್ಲಿ ಮಲಗಿದ್ದ ರೈತರನ್ನು ಗೂಂಡಾಗಳ ರೀತಿಯಲ್ಲಿ ಎಳೆದುಕೊಂಡು ಹೋಗಿದ್ದಾರೆ. ಈ ರೀತಿ ಎಳೆದಾಡುವ ವೇಳೆ ಮಹಿಳಾ ಹೋರಾಟಗಾರರು ಬಿದ್ದು ಅವರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ: ತಾಕತ್ತಿದ್ದರೆ ಗ್ಯಾರೆಂಟಿ ಯೋಜನೆ ನಿಲ್ಲಿಸುವ ಘೋಷಣೆ ಮಾಡಿ: ಅಮಿತ್ ಶಾಗೆ ಸಿದ್ದರಾಮಯ್ಯ ಸವಾಲು
ರೈತರನ್ನು ಈಗಲೂ ಬಂಧನದಲ್ಲಿ ಇಟ್ಟು ದೆಹಲಿಯ ಹೋರಾಟಕ್ಕೆ ತೆರಳದಂತೆ ಪೊಲೀಸರು ಕೇಳಿಕೊಂಡಿದ್ದಾರೆ ಎಂದು ಶಾಂತಕುಮಾರ್ ಅವರು ಜನಶಕ್ತಿ ಮೀಡಿಯಾಗೆ ಮಾಹಿತಿ ನೀಡಿದ್ದಾರೆ. ಅದಾಗ್ಯೂ, ಹೋರಾಟಕ್ಕೆ ತೆರಳಿರುವ ರೈತರು ತಾವು ದೆಹಲಿಗೆ ಹೋಗಿಯೆ ಸಿದ್ದ ಎಂದು ಪಟ್ಟುಹಿಡಿದಿದ್ದಾರೆ ಎಂದು ತಿಳಿದುಬಂದಿದೆ. “ಸರ್ಕಾರ ರೈತರನ್ನು ಪ್ರತಿಭಟನೆಗೆ ಬಾರದಂತೆ ತಡೆಯಲು ಪ್ರಯತ್ನಿಸುತ್ತಿದೆ” ಎಂದು ರೈತ ಮುಖಂಡ ಶಾಂತಕುಮಾರ್ ಅವರು ಹೇಳಿದ್ದಾರೆ.
ರೈತರ ಬಂಧನಕ್ಕೆ ಪ್ರಧಾನಿ ಮೋದಿಯೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು” ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ “ಕ್ರಿಮಿನಲ್ ಮೆದುಳು” ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸರ್ಕಾರ ಎನ್ನುವುದು ಸ್ಪಷ್ಟ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದು, “ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ತಮಿಳುನಾಡು ಅಧಿವೇಶನ | ಸರ್ಕಾರದ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲ ಆರ್.ಎನ್. ರವಿ
“ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ” ಎಂದು ಅವರು ಹೇಳಿದ್ದಾರೆ.
“ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು” ಎಂದು ಸಿಎಂ ಹೇಳಿದ್ದಾರೆ.
ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್‌ನ ಹಲವಾರು ರೈತ ಸಂಘಗಳು ಫೆಬ್ರವರಿ 13 ರಂದು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಒತ್ತಾಯಿಸಲು ಪ್ರತಿಭಟನೆಗೆ ಕರೆ ನೀಡಿವೆ.
ಇದನ್ನೂ ಓದಿ:ಸಂವಿಧಾನವೇ ರಾಷ್ಟ್ರೀಯ ಧರ್ಮ : ರಾಜ್ಯಪಾಲರ ಭಾಷಣದ ಮೂಲಕ ಬಿಜೆಪಿಗೆ ರಾಜ್ಯ ಸರ್ಕಾರ ತಿರುಗೇಟು!
ಅಖಿಲ ಭಾರತ ಕಿಸಾನ್ ಸಭಾ ಖಂಡಿನೆ
ರೈತರ ಬಂಧನವನ್ನು ಅಖಿಲ ಭಾರತ ಕಿಸಾನ್ ಸಭಾ ಖಂಡಿಸಿದ್ದು, “ಇದು ಸರ್ವಾಧಿಕಾರಿ ಕ್ರಮವಾಗಿದೆ. ಈ ಬಂಧನದ ಮೂಲಕ ಎಸ್‌ಕೆಎಂ ಮತ್ತು ಟ್ರೇಡ್ ಯೂನಿಯನ್‌ಗಳು ಕರೆದಿರುವ ಫೆಬ್ರವರಿ 16 ರ ಗ್ರಾಮೀಣ ಭಾರತ್ ಬಂದ್ ಮತ್ತು ಕೈಗಾರಿಕಾ / ವಲಯದ ಮುಷ್ಕರಕ್ಕೆ ಸಜ್ಜುಗೊಳಿಸುವುದನ್ನು ವಿಫಲಗೊಳಿಸುವುದಾಗಿದೆ. ಅನೇಕ ನಾಯಕರನ್ನು ತಮ್ಮ ಮನೆಗಳಿಗೆ ಸೀಮಿತಗೊಳಿಸುವ ಮೂಲಕ ಪ್ರಯಾಣಿಸುವುದನ್ನು ನಿರ್ಬಂಧಿಸಲಾಗಿದೆ” ಎಂದು ಹೇಳಿದೆ.
“ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಇದೇ ರೀತಿಯ ಬಂಧನಗಳು ಮತ್ತು ಗೃಹಬಂಧನಗಳನ್ನು ಮಾಡಲಾಗುತ್ತಿದೆ ಬಳಸಲಾಗುತ್ತಿದೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಭಾರಿ ಪಡೆಗಳನ್ನು ನಿಯೋಜಿಸಲಾಗಿದೆ” ಎಂದು ಎಐಕೆಎಸ್ ಹೇಳಿದೆ.
ವಿಡಿಯೊ ನೋಡಿ: ಗ್ರಂಥಾಲಯ ಸಮ್ಮೇಳನ : ಗ್ರಂಥಾಲಯಗಳು ಶ್ರೀಸಾಮಾನ್ಯರ ವಿಶ್ವವಿದ್ಯಾಲಯಗಳು Janashakthi Media