ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರ ಆಯ್ಕೆ ಕಸರತ್ತಿನಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಸಚಿವ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದರ ನಡುವೆ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಿಡಿ ಭಯ ಕಾಡುತ್ತಿದ್ದು ಕೋರ್ಟ್ ಮೊರೆ ಹೋಗಿದ್ದಾರೆ.
ಸಚಿವರನ್ನು ನೇಮಕ ಮಾಡಲು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಲೆಕ್ಕಾಚಾರಗಳು ಜೋರಾಗಿ ನಡೆದಿದೆ. ಇದರಿಂದ ʻಸಿಡಿ ಭಯ’ದಲ್ಲಿರುವ ಶಾಸಕರಿಗೆ ಸಂಪುಟದಲ್ಲಿ ಅವಕಾಶ ಕೈ ತಪ್ಪುವ ಸಾಧ್ಯತೆ ಇರುವುದು ಮತ್ತೊಂದು ತಲೆನೋವಾಗಿ ಪರಿಣಮಿಸಿದೆ. ಇತ್ತ ಅವರನ್ನು ಬಿಟ್ಟು ಸಂಪುಟ ರಚಿಸುವುದೂ ಕಷ್ಟ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.
ಇದನ್ನು ಓದಿ: ಲಿಂಗಾಯತರ ವಿರೋಧ ಕಟ್ಟಿಕೊಳ್ಳದೆ ತಂತ್ರ ಹೆಣೆದ ಬಿಜೆಪಿ, ಹಿಂದುತ್ವದ ಅಜೆಂಡ ಸಿಎಂ ಆಯ್ಕೆಗೆ ಮುಖ್ಯವಾಯಿತೆ?!
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊರ ಬರುತ್ತಿದ್ದಂತೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಕೆಲವು ವಲಸಿಗರು ತಮ್ಮ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಮೂಲ ಬಿಜೆಪಿಯ ಕೆಲವು ಸಚಿವರು ಹಾಗೂ ಶಾಸಕರು ಸಹ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದಿದ್ದಾರೆ.
ತಡೆಯಾಜ್ಞೆ ತಂದ ವಿಚಾರ ಬಿಜೆಪಿ ಪಕ್ಷಕ್ಕೆ ದೇಶದಲ್ಲಿ ಮುಜುಗರಕ್ಕೆ ಕಾರಣವಾಗಿತ್ತು. ಈ ನಡುವೆ ಆರ್‌ಎಸ್‌ಎಸ್ ನಾಯಕರು ಸಹ ಮುಂದಿನ ನಡೆಗಳ ಬಗ್ಗೆ ಮುಂಜಾಗ್ರತೆಯಿಂದ ಸಿಡಿ ಆತಂಕದಲ್ಲಿರುವವರಿಗೆ ಸಂಪುಟದಲ್ಲಿ ಅವಕಾಶ ನೀಡಬಾರದು ಎಂದು ಸಲಹೆ ನೀಡಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಮಾಜಿ ಸಚಿವ, ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಸುದ್ದಿಗಳು, ಚಿತ್ರಗಳು ಅಥವಾ ವಿಡಿಯೊ ತುಣುಕುಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆಕೋರ್ಟ್ ಮೊರೆ ಹೋಗಿದ್ದಾರೆ.
ಇದನ್ನು ಓದಿ: ಸಂಪುಟ ರಚನೆ : ಸಿಎಂಗೆ ಟೆನ್ಷನ್, ಹಳಬರಿಗೆ ಕೊಕ್?!
ಈ ಸಂಬಂಧ ವಿಚಾರಣೆ ನಡೆಸಿದ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ. ಅವಹೇಳನಕಾರಿಯಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ರೇಣುಕಾಚಾರ್ಯ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 20ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅರ್ಜಿದಾರರಿಗೆ ಅಪಮಾನ ವಾಗುವಂತಹ ಯಾವುದೇ ಸುದ್ದಿ ಬಿತ್ತರಿಸದಂತೆ ನಿರ್ಬಂಧಕಾಜ್ಞೆ ನೀಡಿ ಆದೇಶಿಸಿದೆ.
ಅರ್ಜಿದಾರರು ಹಲವು ವರ್ಷಗಳ ಕಾಲ ಸಾರ್ವಜನಿಕ ಸೇವೆ ಸಲ್ಲಿಸಿದ್ದು, ವಿಧಾನ ಸಭಾ ಕ್ಷೇತ್ರವೊಂದರ ಜನ ಪ್ರತಿನಿಧಿ ಯಾಗಿದ್ದಾರೆ. ಹೀಗಾಗಿ ಆಧಾರ ರಹಿತವಾದ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.