ಪುಣೆ: ಬೆಲೆ ಏರಿಕೆ ನಿಯಂತ್ರಿಸುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ದೂರು ನೀಡಲು ಹೋದ ಎನ್ಸಿಪಿ ಮಹಿಳಾ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಬಿಜೆಪಿ ಕಾರ್ಯಕರ್ತರ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ನೆನ್ನೆ(ಮೇ 16) ಪುಣೆಯಲ್ಲಿ ಆಯೋಜಿಸಲಾಗಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದರು. ಆ ಸಂದರ್ಭದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಬೆಲೆ ಏರಿಕೆ ವಿರುದ್ಧ ಮನವಿ ನೀಡಲು ಎನ್ಸಿಪಿ ಮಹಿಳಾ ಕಾರ್ಯಕರ್ತರು ಮುಂದಾಗಿದ್ದರು. ಅದಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದು ಅಲ್ಲದೆ, ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎನ್ಸಿಪಿ ಪಕ್ಷದ ಕಾರ್ಯಕರ್ತೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಬಿಜೆಪಿಯ ಮೂವರು ಕಾರ್ಯಕರ್ತರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354 (ಮಹಿಳೆ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಸೇರಿದಂತೆ ಇತರ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಡೆಕ್ಕನ್ ಜಿಮಖಾನಾ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಮುರಳೀಧರ ಕರ್ಪೆ ತಿಳಿಸಿದ್ದಾರೆ.
ಎಫ್ಐಆರ್ನಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಎಲ್ಪಿಜಿ ಬೆಲೆ ಏರಿಕೆ ಕುರಿತು ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಮನವಿ ಸಲ್ಲಿಸಲು ಮಹಿಳಾ ಎನ್ಸಿಪಿ ಸದಸ್ಯರು ಕಾರ್ಯಕ್ರಮದ ಸಭಾಂಗಣಕ್ಕೆ ತೆರಳಿದ್ದರು. ಮಹಿಳಾ ಸದಸ್ಯೆ ನೀಡಿರುವ ದೂರಿನಲ್ಲಿ ತಮ್ಮ ಹಾಗೂ ತಮ್ಮ ಪಕ್ಷದ ಇತರ ಕಾರ್ಯಕರ್ತರ ಮೇಲೆ ಬಿಜೆಪಿ ಮುಖಂಡರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಹಿಂದೆ ಪ್ರತಿಪಕ್ಷದಲ್ಲಿದ್ದಾಗ ಸ್ಮೃತಿ ಇರಾನಿ ಅಡುಗೆ ಅನಿಲ ಬೆಲೆ ಏರಿಕೆ ವಿರುದ್ಧವಾಗಿ ಪ್ರತಿಭಟನೆ ನಡೆಸಿ ಭಾರೀ ಚರ್ಚೆಗೆ ಗ್ರಾಸವಾಗಿದ್ದರು. ಈಗ ಅವರು ಹೋದ ಕಡೆಯಲೆಲ್ಲಾ ಪ್ರತಿಪಕ್ಷದ ಸದಸ್ಯರು ಬೆಲೆ ಏರಿಕೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ.