ಹುಬ್ಬಳ್ಳಿ: ರಾಜ್ಯ ಬಿಜೆಪಿಯು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ವರಿಷ್ಠರಿಗೆ ವರದಿ ಸಲ್ಲಿಕೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.
ಬಿಜೆಪಿ ಶಿಸ್ತು ಸಮಿತಿ ರಾಜ್ಯ ಅಧ್ಯಕ್ಷ ಲಿಂಗರಾಜ ಪಾಟೀಲ್ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಚಾಟನೆ ಕುರಿತು ಇದೀಗ ಮಾಹಿತಿ ನೀಡಿದ್ದಾರೆ.
ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು. ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ವಿಧಾನ ಪರಿಷತ್ ಉಪಸಭಾಪತಿ ರುದ್ರಪ್ಪ ಲಮಾಣಿ ಕಾರು ಅಪಘಾತ – ಸ್ಥಿತಿ ಚಿಂತಾಜನಕ
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಕ್ಷೇತ್ರಕ್ಕೆ ತೆರಳಿ ವರದಿ ಸಿದ್ಧಪಡಿಸಿದ್ದೇನೆ. ಪಕ್ಷದ ಕಾರ್ಯಕರ್ತರ ಮತ್ತು ಅಲ್ಲಿನ ಮಂಡಳ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ದಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್‌ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಇಲ್ಲಿಯವರೆಗೂ ಎರಡ್ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರ ಶಾಸಕರ ಉಚ್ಚಾಟನೆ ಆಗುತ್ತದೆ ಎಂದು ಮಾಹಿತಿ ನೀಡಿದರು.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಶಾಸಕ ಸೋಮಶೇಖರ್ ಅವರು ಯಾಕೆ ಸರಕಾರದ ಪರವಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂಬುದು ನಿಮಗೂ ಗೊತ್ತಿದೆ. ರಾಜ್ಯ ಬಿಜೆಪಿ ತೀರ್ಮಾನ ಕೈಗೊಂಡು ಕೇಂದ್ರದ ವರಿಷ್ಠರಿಗೆ ಕಳುಹಿಸಿದೆ. ಈ ಸಂಬಂಧ ಉತ್ತರಕ್ಕೆ ಕಾಯುತ್ತಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಈ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಮರೀಚಿಕೆಯಾಗಿದೆ. ಬೆಲೆ ಏರಿಕೆಯ ಪರಿಣಾಮವಾಗಿ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಜನರ ಜೀವನದ ಮೇಲೆ ಬರೆ ಎಳೆಯುವ ಕೆಲಸವನ್ನು ರಾಜ್ಯ ಸರಕಾರ ಮಾಡಿರುವುದು ಈ ಬಜೆಟ್‍ನಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟಿನಿಂದ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪರಿಸ್ಥಿತಿಗೆ ರಾಜ್ಯ ಬಂದು ನಿಂತಿದೆ. ಇದು ದುರ್ದೈವ. ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಗಮನ ಕೊಡುತ್ತಿಲ್ಲ. ಚೀನಾದಂಥ ದೇಶದಿಂದ 1500ಕ್ಕೂ ಹೆಚ್ಚು ವಿಜ್ಞಾನಿಗಳು ಹೊರಬರುತ್ತಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಹೆಸರುವಾಸಿಯಾದ ನಮ್ಮ ರಾಜ್ಯದಲ್ಲಿ ವಿಜ್ಞಾನ ಕಲಿಕೆಗೆ ಹೆಚ್ಚು ಗಮನ ಕೊಡುತ್ತಿಲ್ಲ ಎಂದು ವಿಜಯೇಂದ್ರ ಅವರು ತಿಳಿಸಿದರು.
46,757 ಸರಕಾರಿ ಶಾಲೆಗಳಲ್ಲಿ 43 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. 16,450 ಖಾಸಗಿ ಶಾಲೆಗಳಲ್ಲಿ 47 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಸರಕಾರ ಶಿಕ್ಷಣದ ಕುರಿತು ಯಾವ ರೀತಿ ಗಮನ ಹರಿಸುತ್ತಿದೆ ಎಂಬುದರ ಕುರಿತು ಗಮನ ಹರಿಸಬೇಕಿದೆ; ಚರ್ಚೆಯೂ ನಡೆಯಬೇಕಿದೆ. ಅನೇಕ ವಿಶ್ವವಿದ್ಯಾಲಯಗಳಲ್ಲಿ ಸಾವಿರಾರು ಸಂಖ್ಯೆಯ ಅರೆಕಾಲಿಕ ಉಪನ್ಯಾಸಕರಿದ್ದಾರೆ. ಒಂದು ಕಡೆ ಕಡಿಮೆ ವೇತನ, ಮತ್ತೊಂದು ಕಡೆ ಸೇವಾ ಭದ್ರತೆ ಇಲ್ಲದೆ ಅವರು ಕೂಡ ಪರದಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಗಮನಿಸದೆ ಇರುವುದು ದುರ್ದೈವ ಎಂದು ಹೇಳಿದರು.
ಇದನ್ನೂ ನೋಡಿ: LIVE: ಜನಚಳುವಳಿಗಳ ಬಜೆಟ್ ಅಧಿವೇಶನ