ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದ ಬೆನ್ನಲ್ಲೇ ಭಾರತದಲ್ಲೂ ಪ್ರವಾಹದ ಆತಂಕ ಎದುರಾಗಿದೆ. ನೇಪಾಳದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದ ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ಘೋಷಿಸಲಾಗಿದೆ.
ಬಿಹಾರದಲ್ಲಿ ಉತ್ತರ ಭಾಗದ ಒಂಬತ್ತು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಶ್ಚಿಮ ಚಂಪಾರಣ, ಪೂರ್ವ ಚಂಪಾರಣ, ಗೋಪಾಲಗಂಜ್, ಮುಜಫರ್‌ಪುರ, ಸೀತಾಮಢಿ, ಶಿವಹರ್, ಮಧುಬನಿ, ಸುಪೌಲ್ ಮತ್ತು ಖಗರಿಯಾ ಜಿಲ್ಲೆಗಳು ಪ್ರವಾಹದ ಸಂಭವನೀಯ ಅಪಾಯ ಎದುರಿಸುತ್ತಿವೆ. ನೇಪಾಳದಿಂದ ಹೆಚ್ಚಿನ ಪ್ರಮಾಣದ ನೀರು ಹರಿದುಬಂದರೆ ಗಂಡಕ್ ಮತ್ತು ಕೋಸಿ ನದಿಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ.
ವಿಶೇಷವಾಗಿ ಪಶ್ಚಿಮ ಚಂಪಾರಣ ಜಿಲ್ಲೆಯ ವಾಲ್ಮೀಕಿನಗರ ಬ್ಯಾರೇಜ್ ಮೇಲೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ. ಗಂಡಕ್ ನದಿಯ ನೀರಿನ ಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ಯಾರೇಜ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಕಾರ್ಯಾಚರಣೆ ನಡೆಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳ ತಂಡಗಳನ್ನೂ ನಿಯೋಜಿಸಲಾಗಿದೆ.
ಇದನ್ನೂ ಓದಿ : ‘ಟಾಕ್ಸಿಕ್’ ಸಿನಿಮಾ ವಿಮರ್ಶೆ | ಕೊಳೆತು ಹೋದ ಹೃದಯದ ಕನ್ನಡಿ
ಇತ್ತ ಉತ್ತರ ಪ್ರದೇಶದಲ್ಲೂ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ವಿಶೇಷವಾಗಿ ಮಹಾರಾಜ್‌ಗಂಜ್ ಮತ್ತು ಕುಶಿನಗರ ಜಿಲ್ಲೆಗಳಲ್ಲಿ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನೇಪಾಳದಿಂದ ಹರಿದುಬರುವ ನೀರಿನಿಂದ ಗಂಡಕ್ ಸೇರಿದಂತೆ ಗಡಿ ಭಾಗದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ನಡುವೆ ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ಕನಿಷ್ಠ 165 ಮಂದಿ ಮೃತಪಟ್ಟಿದ್ದು, 1,000ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಾಪತ್ತೆಯಾದವರಲ್ಲಿ ಕನಿಷ್ಠ 133 ಮಂದಿ ಭಾರತೀಯರು ಹಾಗೂ 37 ಅನಿವಾಸಿ ಭಾರತೀಯರು ಇದ್ದಾರೆ. ಇವರಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕನಿಷ್ಠ 50 ಮಂದಿ ಭಾರತೀಯ ಯಾತ್ರಿಕರೂ ಸೇರಿದ್ದಾರೆ.
ನೇಪಾಳದ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವೂ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪ್ರವಾಹದ ನೀರು ಗಡಿ ದಾಟಿ ಬಿಹಾರ ಮತ್ತು ಉತ್ತರ ಪ್ರದೇಶದ ತಗ್ಗು ಪ್ರದೇಶಗಳಿಗೆ ಹರಿದುಬಂದರೆ ಜನವಸತಿ ಪ್ರದೇಶಗಳು, ಕೃಷಿ ಭೂಮಿ ಹಾಗೂ ಸಂಪರ್ಕ ವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಎರಡೂ ರಾಜ್ಯಗಳ ಜಿಲ್ಲಾಡಳಿತಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ತುರ್ತು ಪರಿಸ್ಥಿತಿಗೆ ಸಿದ್ಧವಾಗುವಂತೆ ಸೂಚಿಸಲಾಗಿದೆ.
ಇದನ್ನೂ ನೋಡಿ : ಬೀದಿ ವ್ಯಾಪಾರಿಗಳ ಬದುಕು ಕಟ್ಟಿಕೊಡುವವರು ಯಾರು? ಸುಪ್ರೀಂ ಕೋರ್ಟ್ ಹೇಳಿರುವುದು ಏನು? Janashakthi Media
