ಕೇಂದ್ರ ಬಜೆಟ್ ಬಗ್ಗೆ ಅಸಮಾಧಾನ: ನೀತಿ ಆಯೋಗದ ಸಭೆಗೆ ಸಿದ್ದು ಸೇರಿದಂತೆ 4 ರಾಜ್ಯಗಳ ಸಿಎಂಗಳು ಗೈರು

ಬೆಂಗಳೂರು:  ಕೇಂದ್ರ ಬಜೆಟ್‌ನಲ್ಲಿ ತಮ್ಮ ರಾಜ್ಯಗಳ ಬೇಡಿಕೆಗಳನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಹಲವು ರಾಜ್ಯಗಳು ಬಹಿಷ್ಕರಿಸಲಿವೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ ಹಾಜರಾಗುವುದು ಅರ್ಥಹೀನ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದಿದ್ದಾರೆ. “ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿ : ಕೇಂದ್ರ ಬಜೆಟ್‌ | ಶಿಕ್ಷಣದ ಮೂಲಭೂತ ಹಕ್ಕಿನ ಪ್ರಸ್ತಾವನೆಯೇ ಇಲ್ಲದಿರುವುದು ದುರದೃಷ್ಟಕರ – ವಿಪಿ ನಿರಂಜನಾರಾಧ್ಯ

“ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆ” ಎಂದಿದ್ದಾರೆ.

‘ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ’ ಎಂದು ತಿಳಿಸಿದ್ದಾರೆ.

‘ಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಡಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವ ತಮ್ಮ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಬಜೆಟ್ ತಮಿಳುನಾಡಿಗೆ “ಅತಿದೊಡ್ಡ ದ್ರೋಹ” ಮಾಡಿದೆ ಎಂದು ಟೀಕಿಸಿದ ಸ್ಟಾಲಿನ್, ಕೇಂದ್ರ ಸರ್ಕಾರದ ಹಣಕಾಸು ನೀತಿಗಳು ಮತ್ತು ಬಜೆಟ್ ಹಂಚಿಕೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು, ತೆಲಂಗಾಣದ ರೇವಂತ್ ರೆಡ್ಡಿ ಮತ್ತು ಹಿಮಾಚಲ ಪ್ರದೇಶದ ಸಿಎಂ ಸುಖವಿಂದರ್ ಸಿಂಗ್ ಸುಖು ಕೂಡ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ. ಈ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತವಿದೆ. ಇದರ ಜೊತೆಗೆ ಇಂದು ಸಂಸತ್ತಿನಲ್ಲಿ ಇಂಡಿಯಾ ಬ್ಲಾಕ್ ಸಂಸದರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನು ನೋಡಿ : ರಾಜ್ಯದಲ್ಲಿ ಹದಿನಾಲ್ಕೂವರೆ ಲಕ್ಷ ಸರ್ಕಾರಿ ಜಮೀನು, ಗೋಮಾಳ ಜಮೀನು ಕುರಿತು ಕಂದಾಯ ಸಚಿವ ಸ್ಪಷ್ಟನೆJanashakthi Media

Donate Janashakthi Media

Leave a Reply

Your email address will not be published. Required fields are marked *