ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಪ್ತ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಲಿಂಬಿಕಾಯಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ತಮ್ಮ ಆಪ್ತ ಸಹಾಯಕರ ಮೂಲಕ ರಾಜೀನಾಮೆ ಪತ್ರವನ್ನು ಬಿಜೆಪಿ ಕೇಂದ್ರ ಕಚೇರಿಗೆ ಸಲ್ಲಿಸಿರುವ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೋಹನ್ ಲಿಂಬಿಕಾಯಿ ಅವರಿಗೆ ಪಕ್ಷದ ಬಾವುಟ ನೀಡಿ ಕಾಂಗ್ರೆಸ್ ಗೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೋಹನ್ ಲಿಂಬಿಕಾಯಿ ಅವರು ಬಿಜೆಪಿ ನಾಯಕರು, ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಅವರ ಕಾನೂನು ಸಲಹೆಗಾರರಾಗಿ ನೇಮಕಗೊಂಡಿದ್ದರು. ಇಂದು ಅವರು ಮಲ್ಲಿಕಾರ್ಜುನ ಖರ್ಗೆ ನಾಯಕತ್ವ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇನ್ನೂ ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ ಎಂದು ಹೇಳಿದರು.
ಮೋಹನ್ ಲಿಂಬಿಕಾಯಿ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಮುಂಬರುವ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಂಚಮಸಾಲಿ ಸಮುದಾಯದ ನಾಯಕನಾಗಿರೋ ಮೋಹನ್ ಲಿಂಬಿಕಾಯಿ, ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ತ್ಯಜಿಸಿ ಕೆಜೆಪಿ ಕಟ್ಟಿದಾಗ ಮೊದಲನೆಯವರಾಗಿ ರಾಜೀನಾಮೆ ಸಲ್ಲಿಸಿದ್ದರು. ಹಾಗೆಯೇ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದರು.
ಇದನ್ನೂ ಓದಿ : ಅನುಚಿತ ವರ್ತನೆ : ವಿಧಾನಸಭಾ ಕಲಾಪದಿಂದ ಬಿಜೆಪಿ ಶಾಸಕ ಅಮಾನತು
ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಕಾನೂನು ಸಲಹೆಗಾರರಾಗಿದ್ದ ಲಿಂಬಿಕಾಯಿ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಲಿಂಬಿಕಾಯಿ, ಬಿಜೆಪಿಯಲ್ಲಿ ಉಸಿರುಕಟ್ಟೋ ವಾತಾವರಣ ಇದೆ. ಆದ್ದರಿಂದ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.
ಮೋಹನ್ ಲಿಂಬಿಕಾಯಿ 2008ರಲ್ಲಿ ವಿಧಾನ ಪರಿಷತ್ ಚುನಾವಣೆಗೆ ವಾಯುವ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ ಹಿರಿಯ ಮುಖಂಡ ಎಚ್. ಕೆ. ಪಾಟೀಲ್‌ರನ್ನು ಸೋಲಿಸಿ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೊದಲಿನಿಂದಲೂ ಯಡಿಯೂರಪ್ಪ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು. 2013ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕೆಜೆಪಿ ಸೇರಿದ್ದರು. ಬಳಿಕ ಕೆಜೆಪಿ ತೊರೆದು ಮಾತೃ ಪಕ್ಷಕ್ಕೆ ಯಡಿಯೂರಪ್ಪಗಿಂತ ಮೊದಲೇ ಮರಳಿದ್ದರು. ಈಗ ಮತ್ತೆ ಬಿಜೆಪಿ ತೊರೆದಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿದ್ದ ಮೋಹನ್ ಲಿಂಬಿಕಾಯಿ ಪರಿಷತ್ ಸದಸ್ಯತ್ವದ 15 ತಿಂಗಳ ಅವಧಿ ಬಾಕಿ ಇರುವಾಗಲೇ ಬಿಜೆಪಿ ತೊರೆದು, ಸ್ಥಾನಕ್ಕೆ ರಾಜೀನಾಮೆ ನೀಡಿ ಕೆಜೆಪಿ ಪಕ್ಷ ಸೇರಿದ್ದರು. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 12,216 ಮತಗಳನ್ನು ಪಡೆದು 4ನೇ ಸ್ಥಾನ ಪಡೆದು ಸೋಲು ಅನುಭವಿಸಿದ್ದರು. ಈಗ ಅದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಈ ಬಾರಿಯ ಚುನಾವಣೆಯಲ್ಲಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಚುನಾವಣೆಯ ಹೊತ್ತಿನಲ್ಲಿ ಅನೇಕ ನಾಯಕರು ಪಕ್ಷಾಂತರ ಮಾಡುತ್ತಿದ್ದಾರೆ, ಪಕ್ಷಾಂತರಗೊಂಡವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕಾನೂನು ಜಾರಿಯಾಗಬೇಕು ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.