ಹುಬ್ಬಳ್ಳಿ: ರಾಜ್ಯ ಬಜೆಟ್ ಘೋಷಣೆಗಳನ್ನು ಶೀಘ್ರ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ಟಿನಲ್ಲಿ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಗಳನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರಕಿಸುವುದು ಹಾಗೂ ಒಂದೇ ಬಾರಿಗೆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಸಮಿತಿ ರಚಿಸಲಾಗಿದೆ ಎಂದರು.
ಇದನ್ನು ಓದಿ: ರಾಜ್ಯ ಬಜೆಟ್ 2022-23: ಕೃಷಿ, ಆರೋಗ್ಯ, ಶಿಕ್ಷಣ ಒಳಗೊಂಡು ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?
ಎಲ್ಲಾ ಇಲಾಖೆಗಳು ಹಣಕಾಸು ಇಲಾಖೆಯ ಜೊತೆ ಸಂಪರ್ಕದಲ್ಲಿರಬೇಕು. ಇಲಾಖೆಗಳ ನಡುವೆ ಸಂವಹನಕ್ಕೆ ಅನುಕೂಲವಾಗುವಂತೆ ಸಮಿತಿ ಕೆಲಸ ಮಾಡಲಿದೆ. ಬಜೆಟ್‍ನಲ್ಲಿ ಘೋಷಿಸಿರುವ ಹೊಸ ಯೋಜನೆಗಳನ್ನು ತೀವ್ರಗತಿಯಲ್ಲಿ ಅನುಷ್ಠಾನಗೊಳಿಸಲು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ಹೇಳಿದರು.
‘ನಮ್ಮ ಸರ್ಕಾರ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡುತ್ತಿದೆ. ನವೆಂಬರ್‌ನಲ್ಲಿ ವಿಶ್ವ ಹೂಡಿಕೆದಾರರ ಸಮಾವೇಶ ಸಂಘಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಕಳೆದ ಮೂರು ತ್ರೈಮಾಸಿಕಗಳ ಅವಧಿಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಭಾರತದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ವಿದೇಶಿ ಹೂಡಿಕೆದಾರರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿ ಇದು’ ಎಂದರು.
‘ಏಪ್ರಿಲ್ 1ರಂದು ಯಶಸ್ವಿನಿ ಯೋಜನೆಗೆ ಚಾಲನೆ ದೊರೆಯಲಿದ್ದು, ಇದರ ಉದ್ಘಾಟನೆಯನ್ನು ಗೃಹ ಸಚಿವ ಅಮಿತ್ ಶಾ ಅವರು ನೆರವೇರಿಸಲಿದ್ದಾರೆ. ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ಜಾರಿಗೆ ತರಲು ಕ್ಷೀರಾಭಿವೃದ್ಧಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಇದರಿಂದ ರೈತರಿಗೆ ಆರ್ಥಿಕ ಸಹಾಯ ಸಿಗುತ್ತದೆ. ಏಪ್ರಿಲ್ 5ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆಯಿದೆ’ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಅಮಿತ್ ಶಾ ಅವರು ಸರ್ಕಾರದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುತ್ತಿರುವುದರಿಂದ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುವುದಿಲ್ಲ. ವರಿಷ್ಠರು ಕರೆದಾಗ ದೆಹಲಿಗೆ ಹೋಗಿ ಈ ಕುರಿತು ಚರ್ಚೆ ಮಾಡುವೆ’ ಎಂದು ಪ್ರತಿಕ್ರಿಯಿಸಿದರು.