ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ದಿಂದ ತನಿಖೆ ನಡೆಸಲು ಕಲ್ಕತ್ತಾ ಹೈಕೋರ್ಟ್ ನಿರ್ದೇಶನ ನೀಡಿದೆ.
ಸೋಮವಾರ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ರಾಮ್‌ಪುರಹಾಟ್‌ನ ಪಂಚಾಯಿತಿಯ ತೃಣಮೂಲ ಕಾಂಗ್ರೆಸ್ ನ ಉಪ ಗ್ರಾಮ ಪ್ರಧಾನ ಬದು ಶೇಖ್ ಹತ್ಯೆಯ ನಂತರ ಭುಗಿಲೆದ್ದ ಹಿಂಸಾಚಾರದಲ್ಲಿ ಗ್ರಾಮದ ಕನಿಷ್ಠ ಹತ್ತು ಮನೆಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಲಾಗಿದ್ದು, ಇದರ ಪರಿಣಾಮವಾಗಿ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು.
ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಆರ್. ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಬಂಧಿತರನ್ನು ಸಿಬಿಐ ವಶಕ್ಕೆ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರ ರಚಿಸಿರುವ ಎಸ್‌ಐಟಿಗೆ ನ್ಯಾಯಾಲಯ ಸೂಚಿಸಿದೆ.
ಇದನ್ನು ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ; ಎಂಟು ಮಂದಿ ಸಜೀವ ದಹನಕ್ಕೂ ಮುನ್ನ ಥಳಿತ
ಏ.7ರೊಳಗೆ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ವರದಿ ಸಲ್ಲಿಸುವಂತೆ ಸಿಬಿಐಗೆ ಕೇಳಿದೆ.
ಸ್ವಯಂಪ್ರೇರಿತ ಅರ್ಜಿಯೊಂದಿಗೆ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎಗೆ ವರ್ಗಾಯಿಸಬೇಕು ಎಂದು ಕೋರಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸಿತು.
ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆ ಮೇಲಿನ ದಾಳಿಯ ಪ್ರಕರಣದಲ್ಲಿ 11 ಮಂದಿಯನ್ನು ಬಂಧಿಸಲಾಗಿದೆ.
ಸಂತ್ರಸ್ತರನ್ನು ಸಜೀವವಾಗಿ ದಹಿಸುವ ಮುನ್ನ, ಅವರ ಮೇಲೆ ತೀವ್ರ ಹಲ್ಲೆ ನಡೆಸಲಾಗಿತ್ತು ಎಂದು ಶವಪರೀಕ್ಷೆಯಲ್ಲಿ ಪತ್ತೆಯಾಗಿದೆ ಎಂದು ರಾಮ್‌ಪುರಹಾಟ್ ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.