ಕ್ಯಾಂಪಸ್ ನಲ್ಲಿ ಎಬಿವಿಪಿ ದಾಂಧಲೆ : ದೂರು ದಾಖಲು

ಬೆಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಬಲವಂತವಾಗಿ ಕ್ಯಾಂಪಸ್‌ಗೆ ಪ್ರವೇಶಿಸಿ ವಿಶ್ವವಿದ್ಯಾಲಯದ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆಂದು ಆರೋಪಿಸಿ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ನೂರಾರು ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳು AISA ಸಂಘಟನೆಯ ನೇತೃತ್ವದಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮವನ್ನು ಅಡ್ಡಿಪಡಿಸುವ ಉದ್ದೇಶದಿಂದ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಕಾಶ್ಮೀರದ ಮಹಿಳೆಯರ ಧ್ವನಿಗಳನ್ನು ಕೇಂದ್ರವಾಗಿಟ್ಟು ನ್ಯಾಯ, ಸ್ಮರಣೆ ಮತ್ತು ಹೊಣೆಗಾರಿಕೆ ಕುರಿತಂತೆ ಚರ್ಚೆ ನಡೆಸಲು ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆದರೆ ಕಾರ್ಯಕ್ರಮ ಆರಂಭವಾಗುವ ಮುನ್ನವೇ ಎಬಿವಿಪಿ ಸದಸ್ಯರು ಕ್ಯಾಂಪಸ್‌ ಪ್ರವೇಶಿಸಿ ಗದ್ದಲ ಸೃಷ್ಟಿಸಿ, ಆಸ್ತಿಪಾಸ್ತಿಗೆ ಹಾನಿ ಮಾಡಿದ್ದು, ಒಬ್ಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಹಲ್ಲೆಗೆ ಒಳಗಾದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಬಿವಿಪಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಪೊಲೀಸರ ನಡೆಗೂ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿದ್ದರೂ ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳು ಹೆಚ್ಚಿನ ಕ್ರಮ ಕೈಗೊಂಡಿಲ್ಲ ಪ್ರತಿಭಟನೆಕಾರರು ಆರೋಪಿಸಿದ್ದಾರೆ.

ಕ್ಯಾಂಪಸ್‌ಗೆ ಬಲವಂತ ಪ್ರವೇಶವನ್ನು ತಡೆಯಲು ಅಥವಾ ಪರಿಸ್ಥಿತಿಯನ್ನು ಶಮನಗೊಳಿಸಲು ತಕ್ಷಣದ ಪ್ರಯತ್ನ ಕಾಣಿಸಲಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಅಜೀಂ ಪ್ರೇಮಜಿ ವಿಶ್ವವಿದ್ಯಾಲಯವು ವಿಮರ್ಶಾತ್ಮಕ ಚಿಂತನೆಗೆ ಅವಕಾಶ ನೀಡುವ ಅಪರೂಪದ ಶೈಕ್ಷಣಿಕ ವಾತಾವರಣ ಹೊಂದಿದೆ ಎಂದು ಹೇಳಿರುವ ವಿದ್ಯಾರ್ಥಿಗಳು, ಆ ಸ್ವಾತಂತ್ರ್ಯವನ್ನು ಕುಂಠಿತಗೊಳಿಸುವ ಉದ್ದೇಶದಿಂದ ಈ ದಾಳಿ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ಘಟನೆಗೆ ಎಸ್ಎಫ್ಐ, ಐಸಾ ಹಾಗೂ ಪ್ರಗತಿಪರ ಸಂಘಟನೆಗಳು, ಚಿಂತಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಸ್ವಾತಂತ್ರ್ಯ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲೆ ನಡೆದ ದಾಳಿಯೆಂದು ಆರೋಪಿಸಿದ್ದಾರೆ. ಎಬಿವಿಪಿ–ಆರ್‌ಎಸ್‌ಎಸ್‌ ಸಂಬಂಧಿತ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

 

Donate Janashakthi Media

Leave a Reply

Your email address will not be published. Required fields are marked *