ಚಿತ್ರದುರ್ಗ: ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಎನ್‌ಡಿಆರ್‌ಎಫ್ ನಿಯಮಗಳಿಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
‘ಹಲವು ತಾಲ್ಲೂಕುಗಳು ಬರಗಾಲದ ಪರಿಸ್ಥಿತಿಯಿಂದ ತತ್ತರಿಸಿದ್ದರೂ, ಕೇಂದ್ರದ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳಿಂದಾಗಿ, ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳಲ್ಲಿ ಬದಲಾವಣೆ ತರುವ ಅಗತ್ಯವಿದೆ” ಎಂದರು.
ಇದನ್ನೂ ಓದಿ:ಕೇಂದ್ರದ ಮಾನದಂಡ ಆಧರಿಸಿ ಬರ ಪೀಡಿತ ಪ್ರದೇಶ ಘೋಷಣೆ:ಕಂದಾಯ ಸಚಿವ ಕೃಷ್ಣ ಬೈರೇಗೌಡ
ಬುಧವಾರ ಸೆ-06 ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಮಳೆ ಕೊರತೆಯಿಂದ ರಾಜ್ಯದ ಹಲವು ತಾಲೂಕುಗಳು ಬರಗಾಲಕ್ಕೆ ತುತ್ತಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆಯಲಾಗಿದ್ದು, ಎನ್‌ಡಿಆರ್‌ಎಫ್ ನಿಯಮಾವಳಿಗಳಲ್ಲಿ ಬದಲಾವಣೆ ತರುವಂತೆ ಮನವಿ ಮಾಡಲಾಗಿದೆ, ದೆಹಲಿಗೆ ತೆರಳಿ ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು. ಬರಗಾಲದ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು 113 ತಾಲ್ಲೂಕುಗಳಲ್ಲಿ ಕಂದಾಯ ಮತ್ತು ಕೃಷಿ ಅಧಿಕಾರಿಗಳ ಜಂಟಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. NDRF ಮಾನದಂಡಗಳ ಪ್ರಕಾರ, 62 ತಾಲ್ಲೂಕುಗಳು ಬರ ಪೀಡಿತರ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಉಳಿದ 51 ತಾಲೂಕುಗಳಲ್ಲಿ ಬೆಳೆ ನಷ್ಟದ ಮರು ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಸೆಪ್ಟೆಂಬರ್-2ರ ಮಳೆ ವರದಿ ಆಧರಿಸಿ ಹೆಚ್ಚುವರಿಯಾಗಿ 83 ತಾಲ್ಲೂಕುಗಳಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು. ಮುಂದಿನ ನಾಲ್ಕು ದಿನಗಳಲ್ಲಿ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಸರಕಾರ ಪ್ರಕಟಿಸಲಿದೆ. ಸರ್ಕಾರ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಿದ ನಂತರ ಪರಿಹಾರ ಕ್ರಮಗಳನ್ನು ಕೈಗೊಂಡು ರೈತರಿಗೆ ಬೆಳೆ ನಷ್ಟಕ್ಕೆ ಪರಿಹಾರ ನೀಡಬಹುದು. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಬರ ಪರಿಹಾರ ಕಾಮಗಾರಿಗಳ ಮೇಲ್ವಿಚಾರಣೆಗೆ ಕಾರ್ಯಪಡೆ ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.