ರಾಜ್ಯದಲ್ಲಿ ಸುಮಾರು 2.5 ಲಕ್ಷ ಜನಸಂಖ್ಯೆಯಿರುವ ಸಮುದಾಯಕ್ಕೆ ಹಿನ್ನಡೆ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮರುಪರಿಶೀಲಿಸಿ ಕೇಂದ್ರದ ಮೇಲೆ ಮತ್ತೆ ಒತ್ತಡ ಹೇರಲು ನಿರ್ಧಾರ
ಚಿತ್ರದುರ್ಗ: ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್ಟಿ) ಪಟ್ಟಿಗೆ ಸೇರಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿದ್ದ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರದ ಈ ನಿರ್ಧಾರದಿಂದ ರಾಜ್ಯದಲ್ಲಿ ಸುಮಾರು 2.5 ಲಕ್ಷ ಜನಸಂಖ್ಯೆ ಹೊಂದಿರುವ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಅವರು ಹೇಳಿದ್ದಾರೆ.
ಮಂಗಳವಾರ ಹಿರಿಯೂರು ಪಟ್ಟಣದ ನಂಜಯ್ಯನಕೋಟಿಗೆಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾಂಗೀಯ ಅಧ್ಯಯನ ವರದಿಯ ಆಧಾರದ ಮೇಲೆ ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸಿದೆ ಎಂದು ತಿಳಿಸಿದರು.
ಹಿರಿಯೂರು ತಾಲ್ಲೂಕಿನಲ್ಲಿಯೇ ಸುಮಾರು 60 ಸಾವಿರ ಕಾಡುಗೊಲ್ಲ ಸಮುದಾಯದ ಜನರಿದ್ದಾರೆ. ಈ ಸಮುದಾಯ ಶೈಕ್ಷಣಿಕ, ರಾಜಕೀಯ ಮತ್ತು ಆರ್ಥಿಕವಾಗಿ ಹಿಂದುಳಿದಿದೆ. ಕೇಂದ್ರದ ನಿರ್ಧಾರದಿಂದ ಸಮುದಾಯದ ಅಭಿವೃದ್ಧಿಗೆ ತೊಂದರೆಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ : Andhra Civic Polls Result; ಎಲ್ಲ13 ಕಾರ್ಪೊರೇಷನ್ಗಳಲ್ಲಿ NDAಗೆ ಮುನ್ನಡೆ; ಮುರಾಸು ಚಂಡಮಾರುತದಿಂದ ಮತ ಎಣಿಕೆಗೆ ಅಡ್ಡಿ
ರಾಜ್ಯದ ವಿರೋಧ ಪಕ್ಷಗಳ ನಾಯಕರು ಕೂಡ ಕೇಂದ್ರ ಸರ್ಕಾರದ ಮನವೊಲಿಸಿ ಕರ್ನಾಟಕದ ಶಿಫಾರಸನ್ನು ಒಪ್ಪಿಸುವುದಾಗಿ ಭರವಸೆ ನೀಡಿದ್ದರು. ಆದರೆ ಕೇಂದ್ರದ ನಿರ್ಧಾರ ನಿರೀಕ್ಷೆಗೆ ವಿರುದ್ಧವಾಗಿದೆ. ಈ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರು ಗಂಭೀರ ಪ್ರಯತ್ನ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು. ಕಾಡುಗೊಲ್ಲ ಸಮುದಾಯಕ್ಕೆ ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ನ್ಯಾಯ ಒದಗಿಸಲು ಕೇಂದ್ರ ಸರ್ಕಾರದ ಮೇಲೆ ಹೊಸದಾಗಿ ಒತ್ತಡ ಹೇರಲಾಗುವುದು. ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಹಿರಿಯೂರು ಭಾಗದಲ್ಲಿ ನೀರಾವರಿ ಕಾಮಗಾರಿಗಳು ಸೇರಿದಂತೆ ಸುಮಾರು 2,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು.
ರಾಜ್ಯದಾದ್ಯಂತ ಬಡವರು ಮತ್ತು ವಸತಿರಹಿತರಿಗೆ ಸುಮಾರು ಐದು ಲಕ್ಷ ನಿವೇಶನಗಳನ್ನು ಗುರುತಿಸಿ ಹಂಚಿಕೆ ಮಾಡುವ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಲಾಗಿದೆ ಎಂದೂ ಮುಖ್ಯಮಂತ್ರಿ ತಿಳಿಸಿದರು.
ಇದನ್ನೂ ನೋಡಿ : ನ್ಯಾಯ ಕೊಡಿಸುವವರಿಗೇ ರಕ್ಷಣೆ ಇಲ್ಲವೇ? ರಾಜ್ಯಾದ್ಯಂತ ಬೀದಿಗಿಳಿದ ವಕೀಲರು Janashakthi Media
