ಉಡುಪಿ : ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸು, ಸಿನಿಮಿಯ ಶೈಲಿಯಲ್ಲಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರಿನ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಇವರನ್ನು ವಶಕ್ಕೆ ಪಡೆಯಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರಿಂದ 7 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪ ಈ ನಾಲ್ವರ ವಿರುದ್ಧವಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್ ಹಾಗೂ ಪ್ರಸಾದ್ ಎಂಬುವರು ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.
ಹಿಂದುತ್ವದ ಕುರಿತು ಉಗ್ರ ಭಾಷಣ ಮಾಡುತ್ತಿದ್ದ ಚೈತ್ರಾ ಕುಂದಾಪುರ ಸಾಮಾಜಿಕ ಸಾಮರಸ್ಯ ಕದಡಲು ಪ್ರಮುಖ ಪಾತ್ರಹಿಸಿದ್ದರು. ಕೊಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಇವರ ಮೇಲೆ ಹಲವು ಕಡೆ ದೂರು ದಾಖಲಾಗಿತ್ತು ಎಂಬುದಾಗಿ ತಿಳಿದು ಬಂದಿದೆ.