ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ಸ್ಪರ್ಧೆ ಮಾಡಿದ್ದಾರೆ. ರಾಮ್‌ನಾಥ್ ಕೋವಿಂದ್ ಅವರ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲು ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಹೊರಬೀಳಲಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್)ಯು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವುದಾಗಿ ತಿಳಿಸಿದೆ.
ಇಂದು(ಜೂನ್ 27) ದೆಹಲಿಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರ ನಾಮಪತ್ರ ಸಲ್ಲಿಕೆಗೆ ಟಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಆಗಮಿಸಿದ್ದಾರೆ. ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಪುತ್ರ ಕೆ.ಟಿ. ರಾಮರಾವ್ ಅವರೊಂದಿಗೆ ಕೆಲವು ಟಿಆರ್‌ಎಸ್ ಸಂಸದರೂ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರುತ್ತಾರೆ.
ಈ ಹಿಂದೆ, ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧಿಸಿದಂತೆ, ತೃಣಮೂಲ ಕಾಂಗ್ರೆಸ್ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಕರೆದಿದ್ದ ವಿರೋಧ ಪಕ್ಷಗಳ ಎರಡೂ ಸಭೆಗಳಿಗೆ ಕೆ ಚಂದ್ರಶೇಖರ್ ರಾವ್ ಗೈರಾಗಿದ್ದರು. ಆದರೆ ಇದೀಗ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತೃತೀಯ ರಂಗ ಸ್ಥಾಪಿಸುವ ಕುರಿತು ಕೆ ಚಂದ್ರಶೇಖರ್ ರಾವ್ ಕಸರತ್ತು ನಡೆಸುತ್ತಿದ್ದು, ಯಶವಂತ್ ಸಿನ್ಹಾಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಎಂದು ಘೋಷಿಸಿದೆ.