ತುಮಕೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಟಿಕೇಟ್ ಆಕಾಂಕ್ಷಿಗಳಲ್ಲೂ ತಳಮಳ ಸೃಷ್ಟಿಸುತ್ತಿದೆ. ರಾಜಕೀಯ ಪಕ್ಷಗಳಲ್ಲಿಯೂ ಭಿನ್ನಮತ ಸ್ಪೋಟಗೊಳ್ಳುತ್ತಿದ್ದು, ಆಡಳಿತ ರೂಢ ಬಿಜೆಪಿ ಪಕ್ಷದಲ್ಲಿ ಟಿಕೇಟ್ ಆಕಾಂಕ್ಷಿಗಳ ರಾಜ್ಯ ನಾಯಕತ್ವದ ವಿರುದ್ಧ ತಿರುಗಿಬಿದ್ದಿದ್ದಾರೆ.
ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಶಾಸಕ ಕಿರಣ್ ಕುಮಾರ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.
ಇದನ್ನು ಓದಿ: ಗುಬ್ಬಿ ವಿಧಾನಸಭಾ ಕ್ಷೇತ್ರ: 100ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರ ರಾಜೀನಾಮೆ
ಕಿರಣ್ ಕುಮಾರ್ ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದರು. ಆದರೆ ಮಾಧುಸ್ವಾಮಿ ಹೊರತುಪಡಿಸಿ ಇನ್ನಾರಿಗೂ ಟಿಕೆಟ್ ಕೊಡುವ ಸಾಧ್ಯತೆ ಇಲ್ಲ. ಆದ್ದರಿಂದ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತಿದ್ದ ಕಿರಣ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದವಾಗಿದ್ದಾರೆ. ನಾಳೆ(ಫೆಬ್ರವರಿ 20) ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸದಸ್ಯತ್ವ ಪಡೆಯಲಿದ್ದಾರೆ.
ಟಿಕೇಟ್ ಗೊಂದಲ ದೂರ: ಕಿರಣ್ ಕುಮಾರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಟಿಕೇಟ್ ಆಕಾಂಕ್ಷಿಗಳಲ್ಲಿ ಗೊಂದಲವೂ ದೂರವಾಗಿದೆ. ಇತ್ತ ಸಚಿವ ಮಾಧುಸ್ವಾಮಿಗೆ ಪ್ರಬಲ ಪೈಪೋಟಿ ನೀಡುತಿದ್ದ ಕಿರಣ್ ಕುಮಾರ್ ಪಕ್ಷ ತೊರೆದಿರುವುದರಿಂದ ಮಾಧುಸ್ವಾಮಿ ಹಾದಿ ಸುಗಮವಾಗಿದೆ. ಅತ್ತ ಕಾಂಗ್ರೆಸ್ನ ಸಮಸ್ಯೆಗೂ ಕಿರಣ್ ಕುಮಾರ್ ಪರಿಹಾರವಾಗಿದ್ದಾರೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ 9 ಮಂದಿ ಟಿಕೇಟ್ ಆಕಾಂಕ್ಷಿಯಾಗಿದ್ದರು. ಕಿರಣ್ ಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆಗಳಿರುವುದರಿಂದ ಗೊಂದಲವೂ ಬಗೆಹರಿದಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ