ಬೆಂಗಳೂರು: ಕೃಷಿ ಸಚಿವ ಚೆಲುವರಾಯ ಸ್ವಾಮಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆನ್ನಲಾದ ಪತ್ರದ ಕುರಿತು ಸಿಐಡಿಗೆ ತನಿಖೆ ನಡೆಸಲು ತೀರ್ಮಾನಿಸಲಾಗಿದೆ.
ಈ ಪ್ರಕರಣದ ಕುರಿತು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಜತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಸಿಐಡಿ ಗೆ ತನಿಖೆಗೆ ಒಪ್ಪಿಸಲು ಸೂಚಿಸಿದ್ದಾರೆ. ಚೆಲುವರಾಯ ಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ ಎಂದು ಹೇಳಲಾಗಿರುವ ದೂರು ಪತ್ರದಲ್ಲಿ ಏಳು ಅಧಿಕಾರಿಗಳ ಸಹಿಯಿದ್ದು, ಆ ಎಲ್ಲಾ ಸಹಿಗಳನ್ನು ಒಬ್ಬರೇ ಮಾಡಿರುವ ಶಂಕೆ ಎದುರಾಗಿರುವುದರಿಂದ ಪ್ರಕರಣವನ್ನು ಸಿಐಡಿಗೆ ಕೊಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:ಹಾಸ್ಟೆಲ್ಗೆ ಅರ್ಜಿ ಹಾಕಿದ ಎಲ್ಲಾ OBC ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡುವಂತೆ ಎಸ್ಎಫ್ಐ ಆಗ್ರಹ
ಮೊದಲು,ಮಾಜಿ ಮುಖ್ಯ ಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ಪತ್ರ ಬರೆದಿಲ್ಲವೆಂದು ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.ಈ ಕುರಿತು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ಮಾಡಿ ಸತ್ಯ ಬಯಲಿಗೆಳೆಯುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದರು