ಪ್ರತಿಭಟನಾ ಸ್ಥಳದ ಮಾನ್ಯತೆ ರದ್ದತಿಗೆ ವಿರೋಧ; “ಪ್ರತಿರೋಧವನ್ನು ನಿಷೇಧಿಸಲು ಸಾಧ್ಯವಿಲ್ಲ” ಎಂದ ಅಭಿಜೀತ್ ದಿಪ್ಕೆ
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಮುಂದಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾ, ಅಜಿಂಕ್ಯ ಶಿಂಧೆ ಸೇರಿದಂತೆ ಹಲವರನ್ನು ದೆಹಲಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹದ ನಡುವೆ ಈ ಬೆಳವಣಿಗೆ ನಡೆದಿದೆ.
ದೆಹಲಿ ಪೊಲೀಸರು ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟು, ಪ್ರತಿಭಟನೆಗಳಿಗೆ ಪರ್ಯಾಯವಾಗಿ ರಾಮಲೀಲಾ ಮೈದಾನ, ಬುರಾರಿ ಮೈದಾನ ಮತ್ತು ಪೂರ್ವ ದೆಹಲಿಯ ಸಿಬಿಡಿ ಮೈದಾನಗಳನ್ನು ಗುರುತಿಸಿದ್ದರು. ಇದನ್ನು ವಿರೋಧಿಸಿದ್ದ ಸಿಜೆಪಿ, ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡುವಂತೆ ಪೊಲೀಸರಿಗೆ 24 ಗಂಟೆಗಳ ಗಡುವು ನೀಡಿತ್ತು.
ಮಂಗಳವಾರ ಬೆಳಿಗ್ಗೆ ಸಿಜೆಪಿ ನಾಯಕರು ರಾಷ್ಟ್ರಧ್ವಜ ಹಿಡಿದು ಜಂತರ್ ಮಂತರ್ ಪ್ರವೇಶಿಸಲು ಯತ್ನಿಸಿದರು. ಕೆಲವರು ಗೇಟ್ ಹಾರಿ ಒಳಗೆ ಪ್ರವೇಶಿಸಿ ಘೋಷಣೆಗಳನ್ನು ಕೂಗಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಘಟನೆಯ ದೃಶ್ಯಗಳನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ಎನ್ಡಿಎ ಮಿತ್ರಪಕ್ಷಗಳಿಗೂ ತಟ್ಟಿದ ಎಸ್ಐಆರ್ ವಿರೋಧಿ ಹೋರಾಟದ ಕಾವು!
ಪ್ರತಿರೋಧವನ್ನು ನಿಷೇಧಿಸಲು ಸಾಧ್ಯವಿಲ್ಲ
ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ, ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿದ್ದಾರೆ. “ಪ್ರತಿರೋಧವನ್ನು ನಿಷೇಧಿಸಲು ಸಾಧ್ಯವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸುತ್ತಿರುವ ಸಿಜೆಪಿ ಹಾಗೂ ಪ್ರತಿಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿವೆ. ಮತದಾರರ ಪಟ್ಟಿಯ ಪರಿಷ್ಕರಣೆಯು ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಪ್ರತಿಭಟನಾಕಾರರು ಹೇಳುತ್ತಿದ್ದಾರೆ. ಮತ್ತೊಂದೆಡೆ, ಚುನಾವಣಾ ಆಯೋಗವು ಯಾವುದೇ ರಾಜಕೀಯ ಪಕ್ಷದ ಪರವಾಗಿ ನಡೆದುಕೊಳ್ಳುತ್ತಿರುವ ಆರೋಪವನ್ನು ನಿರಾಕರಿಸಿದ್ದು, ಪಟ್ಟಿಯಿಂದ ತಪ್ಪಾಗಿ ಹೆಸರು ಕೈಬಿಟ್ಟಿದ್ದರೆ ಮರುನೋಂದಣಿಗೆ ಅವಕಾಶವಿದೆ ಎಂದು ತಿಳಿಸಿದೆ.
ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನಿರಾಕರಿಸಿರುವುದನ್ನು ಸಿಜೆಪಿ ಟೀಕಿಸಿದೆ. ತಮ್ಮ ಉದ್ದೇಶ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿತ್ತು ಎಂದು ಪಕ್ಷ ಹೇಳಿದೆ. ಆದರೆ, ದೆಹಲಿ ಪೊಲೀಸರು ಅನುಮತಿಯಿಲ್ಲದ ಸಭೆಗಳನ್ನು ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಭದ್ರತೆಯನ್ನು ಹೆಚ್ಚಿಸಿರುವುದಾಗಿ ವರದಿಯಾಗಿದೆ.
ಅಕ್ಟೋಬರ್ 10ರಂದು ದೆಹಲಿಗೆ ಆಗಮಿಸಿದ್ದ ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ಟೋಬರ್ 11ರಂದು ಅವರನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಜಂತರ್ ಮಂತರ್ ಪ್ರವೇಶಿಸಲು ಯತ್ನಿಸಿದ ಸಿಜೆಪಿ ನಾಯಕರನ್ನು ಮತ್ತೆ ವಶಕ್ಕೆ ಪಡೆದಿರುವುದು ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧಗಳ ಕುರಿತು ಹೊಸ ವಿವಾದಕ್ಕೆ ಕಾರಣವಾಗಿದೆ.
ಇದನ್ನೂ ನೋಡಿ : ಬೆಂಗಳೂರು | ಎಸ್ಐಆರ್ ವಿರೋಧಿ ಹೋರಾಟಕ್ಕೆ ಪೊಲೀಸ್ ದಬ್ಬಾಳಿಕೆ; ಪತ್ರಕರ್ತರ ಮೇಲೂ ಹಲ್ಲೆ! Janashakthi Media
