ಬೆಂಗಳೂರು: ಕರ್ನಾಟಕದ ನೆರೆ ರಾಜ್ಯ ಕೇರಳದಲ್ಲಿ ಭಾರೀ ಮಳೆ ಸುರಿದ ಪರಿಣಾಮವಾಗಿ ಈಗಾಗಲೇ ಹಲವು ಕಡೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
CM @BSBommai spoke to Kerala CM @vijayanpinarayi and expressed deep grief over the loss of lives due to heavy rains and landslides in Kerala. CM directed officials to extend all possible support to Kerala in relief and rehabilitation efforts and prayed for safety of citizens.
— CM of Karnataka (@CMofKarnataka) October 20, 2021
ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂಬ ಭರವಸೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಯಾರೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.
ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಹಾಗೂ ಭೂಕುಸಿತ ಉಂಟಾಗುತ್ತಿದೆ. ಪ್ರವಾಹದಿಂದಾಗಿ ಪ್ರಾಣ ಹಾನಿ ಆಸ್ತಿ ಪಾಸ್ತಿ ಹಾನಿ ಉಂಟಾಗಿದೆ. ಕೇರಳದಲ್ಲಿ ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದ್ದು ಆತಂಕ ಸೃಷ್ಟಿಯಾಗಿದೆ. ಅಲ್ಲದೆ, 217 ಮನೆಗಳು ನಾಶವಾಗಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವವರ ರಕ್ಷಣೆಗಾಗಿ 304 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.