ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮತ್ತು 40% ಕಮಿಷನ್ ಆರೋಪದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ನೇರ ಕಾರಣ ಎಂಬ ಗಂಭೀರ ಆರೋಪಗಳಿವೆ. ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಕೆ.ಎಸ್. ಈಶ್ವರಪ್ಪ ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಇದನ್ನು ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಖಾತೆಯನ್ನು ಹೊಂದಿದ್ದ ಕೆ.ಎಸ್.ಈಶ್ವರಪ್ಪ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದರು. ಗದಗ ಪ್ರವಾಸದಿಂದ ಮುಖ್ಯಮಂತ್ರಿ ವಾಪಸಾಗುತ್ತಿದ್ದಂತೆ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಒಂದು ಸಾಲಿನ ರಾಜೀನಾಮೆ ಪತ್ರ ಸಲ್ಲಿಸಿದ ಈಶ್ವರಪ್ಪ ಅವರು ‘ನನ್ನ ಸಚಿವ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸ್ತಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.
ಈ ಮೊದಲು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎನ್ನುತ್ತಿದ್ದ ಕೆ ಎಸ್ ಈಶ್ವರಪ್ಪ ಗುರುವಾರ ಸಂಜೆ ದಿಢೀರ್ ಎಂದು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ತಮ್ಮ ಸ್ವಕ್ಷೇತ್ರ ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸುವ ವೇಳೆ ಮಾರ್ಗ ಮಧ್ಯೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡರು.
ಶಿವಮೊಗ್ಗದಿಂದ ಬೆಂಗಳೂರಿಗೆ ಈಶ್ವರಪ್ಪನವರೊಂದಿಗೆ ನೂರಾರು ಕಾರ್ಯಕರ್ತರ ಆಗಮಿಸಿದರು. ಮಾರ್ಗ ಮಧ್ಯೆ, ತಿಪಟೂರಿನಲ್ಲಿರುವ ಸಚಿವ ಬಿಸಿ ನಾಗೇಶ್ ಮನೆಗೆ ಈಶ್ವರಪ್ಪ ಭೇಟಿ ನೀಡಿದ್ದರು.
ಇದನ್ನು ಓದಿ: 40% ಕಮಿಷನ್ ವ್ಯವಹಾರದ ತನಿಖೆಯಾದರೆ ಆರ್ಧದಷ್ಟು ಸಚಿವರು ರಾಜೀನಾಮೆ ಕೊಡುತ್ತಾರೆ: ಪ್ರಿಯಾಂಕ್ ಖರ್ಗೆ
ಈಶ್ವರಪ್ಪ ಜೊತೆ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಮಾತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್, ಸಚಿವರಾದ ಭೈರತಿ ಬಸವರಾಜ, ಎಂಟಿಬಿ ನಾಗರಾಜ್ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗದಗ ಜಿಲ್ಲಾ ಪ್ರವಾಸ ಮುಗಿಸಿ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಎಚ್ಎಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ರೇಸ್ ಕೋರ್ಸ್ ರಸ್ತೆಯ ನಿವಾಸಕ್ಕೆ ಬಂದ ಬಂದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ
ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರೇ ಕಾರಣ ಎಂದು ಗುತ್ತಿಗೆದಾರ ಸಂತೋಷ್ ಮಾಧ್ಯಮಗಳಿಗೆ ಆತ್ಮಹತ್ಯೆ ಸಂದೇಶವನ್ನು ಕಳುಹಿಸಿ, ಉಡುಪಿಯಲ್ಲಿ 2022ರ ಏಪ್ರಿಲ್ 12ರಂದು ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದರು. ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿದ್ದ ಸಂತೋಷ್, ನನ್ನ ಪತ್ನಿ, ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದರು.
ಇದನ್ನು ಓದಿ: ಸ್ವಗ್ರಾಮಕ್ಕೆ ಸಂತೋಷ ಪಾಟೀಲ್ ಮೃತದೇಹ – ಗ್ರಾಮಸ್ಥರ ಆಕ್ರಂದನ
ನನ್ನ ಸಾವಿಗೆ ನೇರ ಕಾರಣ ಕೆಎಸ್ ಈಶ್ವರಪ್ಪ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪನವರು ಸಹಾಯ ಹಸ್ತ ನೀಡಬೇಕು. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು ಎಂದು ಸಂತೋಷ್ ಮಾಧ್ಯಮಗಳಿಗೆ ಕಳುಹಿಸಿದ್ದ ಸಂದೇಶದಲ್ಲಿ ತಿಳಿಸಿದ್ದರು.