ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳಲ್ಲಿನ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ಕಲ್ಪಿಸುವ ಎರಡು ಕಾಯ್ದೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೂ. 17ರಂದು ಬೆಳಗ್ಗೆ ಟ್ವೀಟ್ ಮಾಡಿದ್ದರು. ಆದರೆ, ಕೆಲವೇ ಗಂಟೆಗಳಲ್ಲಿ ಆ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.
ಅವರು ಆ ಟ್ವೀಟ್ ಡಿಲೀಟ್ ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯದ ಪ್ರತಿಷ್ಟಿತ ಖಾಸಗಿ ಉಧ್ಯಮಗಳ ಪ್ರಭಾವಕ್ಕೆ ಸಿಎಂ ಒಳಗಾದರಾ? ಎಂಬ ಚರ್ಚೆಗಳು ಕೇಳಿ ಬರುತ್ತಿವೆ.
ಸಿಎಂ ಟ್ವೀಟ್ ಮಾಡಿದ್ದ ಮೊದಲ ಪೋಸ್ಟ್‌ನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಸಿ ಮತ್ತು ಡಿ ದರ್ಜೆ ಹುದ್ದೆಗಳಿಗೆ ಶೇ. 100 ರಷ್ಟು ಎನ್ನುವುದು ಇತ್ತು.(x.com/siddaramaiah/status/1813181441657958865) ಆದರೆ ಬಿಲ್ ನಲ್ಲಿ, ಮ್ಯಾನೇಜ್ಮೆಂಟ್ ಕೋಟಾದಲ್ಲಿ 50% ನಾನ್ ಮ್ಯಾನೇಜ್ಮೆಂಟ್ ಕೋಟಾ 70% ಎಂಬ ನಿಯಮ ಇದೆ. ಹೀಗಾಗಿ ಸಿಎಂ ನೂರಕ್ಕೆ ನೂರರಷ್ಟು ಅನ್ನುವ ಪದ ಬಳಕೆ ಟ್ವೀಟ್ ನಲ್ಲಿ ಮಾಡಿದ್ದಕ್ಕೆ ಡಿಲೀಟ್ ಮಾಡಿರಬಹುದು ಎಂದು ಹೇಳಲಾಗುತ್ತಿದೆ.
ಈ ಕುರಿತು ಮತ್ತೆ ಇಂದು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.
ಮತ್ತೊಂದೆಡೆ, ರಾಜ್ಯ ಸರ್ಕಾರದ ಈ ಎರಡು ಕಾಯ್ದೆಗಳಿಗೆ ಕೈಗಾರಿಕಾ ವಲಯದಿಂದ ಹಾಗೂ ಖಾಸಗಿ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅದೇ ಕಾರಣಕ್ಕಾಗಿಯೇ ಸಿದ್ದರಾಮಯ್ಯನವರು ಈ ಟ್ವೀಟ್ ಡಿಲೀಟ್ ಮಾಡಿದರೇ ಎಂಬ ಪ್ರಶ್ನೆಗಳು ಎದ್ದಿವೆ.