ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಅಥವಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂ.11) ಚಾಲನೆ ನೀಡಿದರು.
ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಹೆಚ್ಚು ಭಾಗಿಯಾಗಬೇಕು. 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಗ್ಯಾರಂಟಿಗಳ ಟೀಕೆಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಜುಲೈ 1ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ ಎಂದರು.
ರಾಜ್ಯದ ಜನತೆ ನಮ್ಮ ಮೇಲೆ ನಂಬಿಕೆ ಇಟ್ಟು ಜನರ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಐದು ಗ್ಯಾರಂಟಿ ಘೋಷಣೆ ಮಾಡಿದ್ದೆವು. ಹೆಣ್ಣು ಕುಟುಂಬದ ಕಣ್ಣು, ಹೆಣ್ಣಿಗೆ ಭಾರತದ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನ ಇದೆ ಎಂದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೀಪ ಬೆಳಗುವುದರ ಮೂಲಕ ಶಕ್ತಿ ಯೋಜನೆ ಉದ್ಘಾಟಿಸಿದರು. ಇದೇ ವೇಳೆ ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು. ಸುಮಿತ್ರಾ, ರಾಧಾ, ಪ್ರೇಮಾ, ಕಲಾವತಿ, ಪವಿತ್ರಾ ಸ್ಮಾರ್ಟ್ ಕಾರ್ಡ್ ನ ಮೊದಲ ಫಲಾನುಭವಿಗಳಾದರು.
ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಚಾಲನೆ : ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಾಂಕೇತಿಕವಾಗಿ ಟಿಕೆಟ್ ನೀಡಿ ಚಾಲನೆ ಕೊಡಲಾಗುತ್ತದೆ.
ಶಕ್ತಿ ಯೋಜನೆ ಕುರಿತಂತೆ ಈ ಕೆಳಗಿನ ಷರತ್ತುಗಳನ್ನೂ ವಿಧಿಸಲಾಗಿದೆ..
1. ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲಾ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆ ಅನ್ವಯಿಸುತ್ತದೆ.
2. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎ.ಸಿ. ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಬಸ್ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
3. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಶೇ.50 ಆಸನಗಳನ್ನು ಪುರುಷರಿಗೆ ಕಾಯ್ದಿರಿಸಬೇಕು.
4. ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ಭರಿಸಲಾಗುವುದು. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಬೇಕು.
5. “ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಬೇಕು.