ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡಿನ ಜನತೆಯನ್ನುದ್ದೇಷಿಸಿ ಭಾಷಣ ಮಾಡಿದರು.
ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ:ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಎನ್‌ಇಪಿ ರದ್ದು:ಸಿಎಂ ಸಿದ್ದರಾಮಯ್ಯ
ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಮತ್ತು ನಾವುಗಳು ಎಲ್ಲಾರು ಶ್ರದ್ಧಾಪೂರ್ವಕವಾಗಿ ಸ್ಮರಿಸಬೇಕು ಎಂದರು.
ಗ್ಯಾರೆಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಸಿಎಂ
ಇದೇ ವೇಳೆಯಲ್ಲಿ ತಮ್ಮ ಸರ್ಕಾರದ ಸಾಧನೆಗಳು ಗ್ಯಾರೆಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿ ಮಾತನಾಡಿದ ಸಿಎಂ ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ ಎಂದರು. ಅಬಿವೃದ್ಧಿಯೆ ಸ್ವಾತಂತ್ರ್ಯ ಎಂಬುವುದರಲ್ಲಿ ನಂಬಿಕೆಯನ್ನು ಇಟ್ಟು ಈ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆ ಎಂದು ಹೇಳಿದರು.
ಭಾಷಣದಲ್ಲಿ ಹಿಂದಿನ ಬಿಜೆಪಿ ಸರ್ಕಾರವನ್ನು ಪರೋಕ್ಷವಾಗಿ ಟೀಕೆ ಮಾಡಿದ ಅವರು, ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುವುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ ಎಂದರು.
ಬೆಲೆ ಏರಿಕೆ,ನಿರುದ್ಯೋಗ,ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ,ಭ್ರಷ್ಟಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರ್ಕಾರ ಜನರ ಆರ್ಥಿಕ,ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರೆಂಟಿ ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೂ ಮೊದಲು ನಾವು ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ, ಸರ್ಕಾರ ಅಧಿಕಾರಕ್ಕೆ ಬಂದ ಮೂರು ವಾರಗಳಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ನೇರವಾಗಿ ತಲುಪಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.