ಬೆಂಗಳೂರು: ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಡಿಯೊ ಸಂವಾದವನ್ನು ನಡೆಸಿ, ಚರ್ಚಸಿದರು.
ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದವನ್ನು ನಡೆಸಿದ ಮುಖ್ಯಮಂತ್ರಿ ರಾಜ್ಯದ ಒಟ್ಟು ಪ್ರಕರಣಗಳಲ್ಲಿ 65 ಸಾವಿರ ಸಕ್ರಿಯ ಪ್ರಕರಣಗಳು ಈ ಎಂಟು ಜಿಲ್ಲೆಗಳಲ್ಲಿವೆ. ಆದ್ದರಿಂದ ಕೋವಿಡ್ ಪ್ರಕರಣಗಳು ಹೆಚ್ಚಳವಾಗದಂತೆ, ಶೇಕಡಾ 5ಕ್ಕಿಂತ ಕಡಿಮೆಗೊಳಿಸುವ ಬಗ್ಗೆ ಕ್ರಮವಹಿಸಲು ಸೂಚನೆ ನೀಡಿದರು.
ಇದನ್ನು ಓದಿ: ಮುಖ್ಯಮಂತ್ರಿ ಸ್ಥಾನ ಭದ್ರಪಡಿಸಿಕೊಂಡ ಬಿಎಸ್‌ವೈ
ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೆ ತಂದ ಕಠಿಣ ನಿರ್ಬಂಧಗಳಿಂದಾಗಿ ಸೋಂಕಿನ ತೀವ್ರತೆ ಇಳಿಮುಖವಾಗುತ್ತಿದೆ. ಆದರೆ ಪ್ರಮುಖ ಎಂಟು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿರೀಕ್ಷಿಸಿದಷ್ಟು ಕಡಿಮೆಯಾಗುತ್ತಿಲ್ಲ. ಬೆಂಗಳೂರು ನಗರದ ಸ್ಥಾನವನ್ನು ಪಡೆದಿರುವ ಮೈಸೂರಿನಲ್ಲಿ ನಗರ ಪ್ರದೇಶಗಳಲ್ಲೇ ಹೆಚ್ಚಿನ ಪ್ರಕರಣಗಳು ದೃಢಪಡುತ್ತಿವೆ. ಇತರೆ ಜಿಲ್ಲೆಗಳಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿರುವ ಕುರಿತು ಮುಖ್ಯಮಂತ್ರಿಗಳು ಆತಂಕಗೊಂಡರು.
ಚಿಕ್ಕಮಗಳೂರು ಜಿಲ್ಲೆ ಸರಾಸರಿ ಸರಾಸರಿ ಶೇಕಡಾ 25.17ರಷ್ಟು ಸಕ್ರಿಯ ಪ್ರಕರಣಗಳು ಇವೆ. ಮೈಸೂರಿನಲ್ಲಿಯೂ ಶೇಕಡಾ 22 ರಷ್ಟಿದೆ. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿ ಸೋಂಕಿತರಿಗೆ ಸರಾಸರಿ ಕೇವಲ 6.1 ಸಂಪರ್ಕಿತರನ್ನು ಪತ್ತೆಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೋವಿಡ್ 19 ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು. ಜನರು ನಿರ್ಬಂಧಗಳನ್ನು ಉಲ್ಲಂಘಿಸದಂತೆ ಕ್ರಮ ಕೈಗೊಳ್ಳಬೇಕು. ಸೂಚಿತ ವಲಯಗಳಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಗೆ ಒತ್ತು ನೀಡಬೇಕು. ಕೋವಿಡ್ ಪ್ರಕರಣಗಳ ಪ್ರಮಾಣ ತೀವ್ರಗತಿಯಲ್ಲಿ ಇಳಿಕೆಯಾಗುವಂತೆ ಮಾಡಬೇಕು ಮತ್ತು ಸಕ್ರಿಯ ಪ್ರಕರಣಗಳನ್ನು ಶೇಕಡಾ 5ರ ಒಳಗಿರುವಂತೆ ಖಾತರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.
ಇದನ್ನು ಓದಿ: ಜಿಲ್ಲಾಧಿಕಾರಿಗಳೊಂದಿಗೆ ಮಾಹಿತಿ ಪಡೆಯಲು ಅವಕಾಶ ಕಲ್ಪಿಸಬೇಕೆಂದು ಸ್ವೀಕರ್ ರವರಿಗೆ ಪತ್ರ ಬರೆದ ಸಿದ್ದರಾಮಯ್ಯ
ಬೆಳಗಾವಿ, ಹಾಸನ ಮೊದಲಾದ ಜಿಲ್ಲೆಗಳಲ್ಲಿ ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಜಾಸ್ತಿ ಮಾಡಲಾಗುತ್ತಿದೆ. ಸರ್ಕಾರದ ಮಾರ್ಗ ಸೂಚಿಯಂತೆ ಶೇ. 30 ರಷ್ಟು ನಡೆಸಲು ಸೂಚಿಸಲಾಯಿತು. ಉಳಿದ ಶೇ. 70 ರಷ್ಟು ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ನಡೆಸಬೇಕು. ಸೋಂಕಿನ ಲಕ್ಷಣ ಇರುವವರಿಗೆ ಮಾತ್ರ ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.
ಆರ್.ಟಿ.ಪಿ.ಸಿ.ಆರ್. ಪರೀಕ್ಷಾ ವರದಿ 24 ಗಂಟೆಗಳ ಒಳಗೆ ನೀಡಬೇಕು, ಸೋಂಕಿತರ ಆರೋಗ್ಯ ಸ್ಥಿತಿಗನುಗುಣವಾಗಿ ವರ್ಗೀಕರಣ ಮಾಡುವ ಪ್ರಕ್ರಿಯೆ ತ್ವರಿತವಾಗಿ ನಡೆಸಬೇಕು. ಮೈಸೂರು ಹೊರತು ಪಡಿಸಿ ಇತರ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೋಂಕು ತೀವ್ರವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸಬೇಕು, ಎಲ್ಲ ಜಿಲ್ಲೆಗಳಲ್ಲಿ, ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು ಸೂಚಿಸಿದರು.
ಇದನ್ನು ಓದಿ: ಮೈಸೂರು ಲ್ಯಾಂಡ್ ಮಾಫೀಯಾ ಹಿಂದೆ ಸಾರಾ ಇದ್ದಾರೆ? ತನಿಖೆಗೆ ಮುಂದಾಗಿದ್ದಕ್ಕೆ ವರ್ಗಾವಣೆ – ರೋಹಿಣಿ ಸಿಂಧೂರಿ
ಕೆಲವು ಚಟುವಟಿಕೆಗಳನ್ನು ಹೊರತುಪಡಿಸಿ, ನಿರ್ಬಂಧಗಳನ್ನು ಮುಂದುವರೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಈ ಬಗ್ಗೆ ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ ನಾರಾಯಣ, ಆರೋಗ್ಯ ಸಚಿವ ಡಾ. ಎಸ್ ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ, ಯುವಜನ ಮತ್ತು ಕ್ರೀಡಾ ಸಬಲೀಕರಣ ಸಚಿವರಾದ ಕೆ ಸಿ ನಾರಾಯಣಗೌಡ, ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಅಪರ ಮುಖ್ಯ ಕಾರ್ಯುದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.