ಬೆಂಗಳೂರು: ರಾಮನಗರದಲ್ಲಿ ಮ್ಯಾನ್‌ಹೋಲ್‌ನಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಮರಣ ಹೊಂದಿದ ಕುಟುಂಬದವರಿಗೆ ಸರಕಾರದ ವತಿಯಿಂದ ಪರಿಹಾರ ಘೋಷಣೆಯಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ ₹18.5 ಲಕ್ಷ ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರವನ್ನು ಸರಕಾರವು ತಕ್ಷಣವೇ ಪ್ರಕಟಿಸಿದೆ ಎಂದು ತಿಳಿಸಿದರು.
ಇದನ್ನು ಓದಿ: ರಾಮನಗರ: ನಿರ್ಮಾಣ ಹಂತದ ಮ್ಯಾನ್‌ಹೋಲ್‌ನಲ್ಲಿ ಮೂವರು ಕಾರ್ಮಿಕರು ಸಾವು
ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ.
ಘಟನೆ ನಡೆದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಡಿಸಿಎಂ, ದುರಂತದ ಬಗ್ಗೆ ಸಮಗ್ರವಾದ ವಿವರವನ್ನು ಸಂಗ್ರಹಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.