ಬೆಂಗಳೂರು: ಪರಿಶಿಷ್ಟ ಜಾತಿ(ಎಸ್ಸಿ), ಪರಿಶಿಷ್ಟ ಪಂಗಡಎಸ್ಟಿ), ಮೀಸಲಾತಿ ಹೆಚ್ಚಳ ಮಾಡಿ ರಾಜ್ಯ ಬಿಜೆಪಿ ಸರ್ಕಾರ ಆದೇಶ ಮಾಡಿದರೂ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿಲ್ಲವೆಂದು ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ರಾಜಭವನ ಚಲೋ ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಪಿಸಿಸಿ ಕಛೇರಿಯಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ಕಾಂಗ್ರೆಸ್ ಮುಖಂಡರನ್ನು ಬಂಧಿಸಿ ಬಸ್ ನಲ್ಲಿ ಕರೆದೊಯ್ಯಲಾಯಿತು.
ಸಿದ್ದರಾಮಯ್ಯ ಮಾತನಾಡಿ, ಮೀಸಲಾತಿ ಹೆಚ್ಚಳ ಬಗ್ಗೆ ಕಳೆದ ಐದು ತಿಂಗಳಿಂದ ಶಿಫಾರಸು ಮಾಡಿಲ್ಲ, ಈಗ ಮಾಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಮುದಾಯ ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಕ್ಕೆಸೇರಿಸಬೇಕು. ರಾಜ್ಯ ಸರ್ಕಾರಕ್ಕೆ ಕಿವಿ ಕೇಳುತ್ತಿಲ್ಲ. ಇಂದಿನದಿನದವರೆಗೂ ಸುಮ್ಮನಿದ್ದ ಅವರು ನಾವು ಪ್ರತಿಭಟನೆಗೆ ಮುಂದಾಗುತ್ತಿದ್ದಂತೆಯೇ ಕಳುಹಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಂಧನಕ್ಕೆ ಹೆದರುವ ಮಕ್ಕಳು ನಾವಲ್ಲ, ಹೋರಾಟದ ಕಿಚ್ಚು ಕಾಂಗ್ರೆಸ್ ಕುಟುಂಬದ ರಕ್ತದಲ್ಲಿ ಹರಿಯುತ್ತಿದೆ. ದಲಿತರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟದ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.