ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಯ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ್ದನ್ನು ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.
ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.
ಮೈಸೂರು, ತುಮಕೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಸಿಎಂ ಪರ ಘೋಷಣೆ ಕೂಗಿ ರಾಜ್ಯಪಾಲರ ವಿರುದ್ದ ಧಿಕ್ಕಾರ ಕೂಗಿದ್ದಾರೆ. ಮಂಡ್ಯದಲ್ಲಿ ಅಹಿಂದ ಬಳಗ ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ನರಸೀಪುರದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜಂಟಿಯಾಗಿ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ರಾಜೀನಾಮೆಗೆ ಒತ್ತಾಯಿಸಲಿದೆ.