ಅನ್ನಭಾಗ್ಯ ಯೋಜನೆಗೆ ಅಡ್ದಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಅಕ್ಕಿ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಜಟಾಪಟಿ ತಾರಕಕ್ಕೇರಿದೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ನಗರದ ಫ್ರೀಡಂ ಪಾರ್ಕ್ ನಲ್ಲಿ ಅಕ್ಕಿ ಬೇಯಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಹಿಂದೆ ಅಕ್ಕಿ ಕೊಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುವ ಉದ್ದೇಶದಿಂದ ಅಕ್ಕಿ ಕೊಡಲ್ಲ ಎಂದು ಹೇಳುತ್ತಿದೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.ರಾಜ್ಯದ ಜನರಿಗೆ ಐದು ಗ್ಯಾರಂಟಿ ಘೋಷಿಸಲಾಗಿದ್ದು, 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದೇವೆ. ಆದರೆ, ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದ್ದು, ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಿ ಬಡವರಿಗೆ ನೀಡುತ್ತೇವೆ. ಈ ಯೋಜನೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಕೆಲವರು ರಾಗಿ, ಜೋಳ ಕೊಡಿ ಎಂದು ಮನವಿ ಮಾಡಿದ್ದಾರೆ. ಅವರ ಮನವಿಯನ್ನು ಸಹ ಪರಿಗಣಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಅನ್ನಭಾಗ್ಯ ಅಕ್ಕಿಗೆ ಕೇಂದ್ರ ಸರ್ಕಾರ ಕೊಕ್ಕೆ – ಸಿದ್ದರಾಮಯ್ಯ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಅಕ್ಕಿ ಪೂರೈಕೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಕೇಂದ್ರ ಸರ್ಕಾರ ಫ್ರಿಯಾಗಿ ಕೊಡಲ್ಲ, ಬೇರೆ ರಾಜ್ಯ ಏಪನ್ ಮಾರ್ಕೆಟ್ ನಲ್ಲಿ ಖರೀದಿ ಮಾಡುತ್ತೇವೆ ಎಂದು ತಿಳಿಸಿದರು. ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 

Donate Janashakthi Media

Leave a Reply

Your email address will not be published. Required fields are marked *