ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ನಡೆಯುತ್ತಿರುವ ರಾಜಕೀಯ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆಯಲು ಪ್ರಯತ್ನಿಸಿದೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಬದಲಾವಣೆ ಕುರಿತು ಹರಿದಾಡುತ್ತಿರುವ ಸುದ್ದಿಗಳಿಗೆ ಯಾವುದೇ ವಾಸ್ತವ ಇಲ್ಲ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆ.ಸಿ. ವೇಣುಗೋಪಾಲ್ ಭಾಗವಹಿಸಿದ್ದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೇಣುಗೋಪಾಲ್, “ಇಂದು ನಡೆದ ಸಂಪೂರ್ಣ ಚರ್ಚೆ ಕರ್ನಾಟಕದ ಮುಂಬರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ಬಗ್ಗೆ ಮಾತ್ರ ಕೇಂದ್ರೀಕೃತವಾಗಿತ್ತು. ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಎಲ್ಲ ಊಹಾಪೋಹಗಳು ಕೇವಲ ಊಹಾಪೋಹಗಳಷ್ಟೇ. ಅದರಲ್ಲಿ ಯಾವುದೇ ವಾಸ್ತವ ಇಲ್ಲ” ಎಂದು ಹೇಳಿದರು.
ರಾಜ್ಯಸಭೆ ಮತ್ತು ವಿಧಾನ ಪರಿಷತ್ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆ ನಡೆದಿದ್ದು, ಇತರ ರಾಜ್ಯಗಳ ಅಭ್ಯರ್ಥಿಗಳ ಜೊತೆ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯನ್ನೂ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. ಮುಖ್ಯಮಂತ್ರಿ
ಇದನ್ನೂ ಓದಿ : ಟಿಎಂಸಿಯಲ್ಲಿ ಭಿನ್ನಮತದ ಸುಳಿವು? ಬಿಜೆಪಿ ಸರ್ಕಾರದ ಸಭೆಯಲ್ಲಿ ಟಿಎಂಸಿ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಭಾಗಿ
ಕಳೆದ ಕೆಲವು ವಾರಗಳಿಂದ ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಮಾತುಕತೆಗಳು ಜೋರಾಗಿದ್ದವು. ಈ ಹಿನ್ನೆಲೆಯಲ್ಲೇ ದೆಹಲಿ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು.
ಆದರೆ ಕಾಂಗ್ರೆಸ್ ಹೈಕಮಾಂಡ್ ಇದೀಗ ಮುಖ್ಯಮಂತ್ರಿ ಸ್ಥಾನ ಕುರಿತ ಗೊಂದಲಕ್ಕೆ ತೆರೆ ಎಳೆಯಲು ಯತ್ನಿಸಿದ್ದು, ಸರ್ಕಾರ ಮತ್ತು ಪಕ್ಷ ಸಂಘಟನೆ ಮೇಲೆ ಗಮನ ಕೇಂದ್ರೀಕರಿಸುವ ಸಂದೇಶ ನೀಡಿದೆ ಎಂದು ರಾಜಕೀಯ ವಲಯ ವಿಶ್ಲೇಷಿಸಿದೆ. ಮುಖ್ಯಮಂತ್ರಿ
