- ಹೋರಾಟಕ್ಕೆ ಸಜ್ಜಾದ ಗುತ್ತಿಗೆದಾರರ ಸಂಘ
- ಸಿದ್ದರಾಮಯ್ಯರನ್ನು ಭೇಟಿ ಮಾಡಲಿರುವ ರಾಜ್ಯ ಗುತ್ತಿಗೆದಾರರ ಸಂಘ
- ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ‘ಕೈ’ ತಯಾರಿ
ಬೆಂಗಳೂರು: ರಾಜ್ಯದಲ್ಲಿ ಮತ್ತೆ 40% ಕಮೀಷನ್ ಆರೋಪ ಜೀವ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಗುತ್ತಿಗೆದಾರರ ಸಂಘ ಮುಂದಾಗಿದೆ. ಗುತ್ತಿಗೆದಾರರು ದೂರು ನೀಡಿ ಒಂದೂವರೆ ವರ್ಷವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೆಂಪಣ್ಣ ಪ್ರಸ್ತಾಪಿಸಲಿದ್ದಾರೆ. ಈ ಮೂಲಕ ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಮತ್ತೆ ಮುಂಚೂಣಿಗೆ ತರಲು ಗುತ್ತಿಗೆದಾರರ ಸಂಘ ಮುಂದಾಗಿದೆ.
ಈ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾತನಾಡಿ, ಒಂದು ವರ್ಷ 2 ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ಸಿಎಂ ಮಾತಿಗೂ ಬೆಲೆ ಇಲ್ಲದಂತಾಗಿದೆ. ಮಾನ, ಮರ್ಯಾದೆ ಇಲ್ವಾ ಜನ ಪ್ರತಿನಿಧಿಗಳು ಇವರು. ಇನ್ನೂ 22 ಸಾವಿರ ಕೋಟಿ ಬಿಲ್ ಪೆಂಡಿಂಗ್ ಇದೆ. ಕೆಲವರದು 3 ವರ್ಷಗಳಿಂದ ಬಾಕಿ ಇದೆ. ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ ಇದಾಗಿದೆ. ಇದರಲ್ಲಿ ಬೊಮ್ಮಾಯಿ ಸೇರಿದಂತೆ ಎಲ್ಲರೂ ಇದ್ದಾರೆ. ಯಾರಿಗೂ ರ‍್ಯಾಂಕಿಂಗ್ ಕೊಡೋಕೆ ಆಗಲ್ಲ ಎಂದು ಆರೋಪಿಸಿದರು.
ವಿಪಕ್ಷ ನಾಯಕರ ಜೊತೆ ಮಾತುಕತೆ : ಈ ಮಧ್ಯೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೂ ಭೇಟಿ ಮಾಡಿರುವ ಗುತ್ತಿಗೆದಾರರ ಸಂಘದ ನಿಯೋಗ ಭೇಟಿ ಮಾಡಿ ಚರ್ಚೆ ನಡೆಸಿದೆ. ಸಿದ್ದರಾಮಯ್ಯ ಮನೆಗೆ ಗುತ್ತಿಗೆದಾರರ ಸಂಘದ 30ಕ್ಕೂ ಹೆಚ್ಚು ಸದಸ್ಯರು ಭೇಟಿ ನೀಡಿದ್ದಾರೆ. ಕರ್ನಾಟಕದ ವಿಧಾನಸಭೆ ಚುನಾವಣೆ ಇನ್ನೊಂದು ವರ್ಷದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಅವರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ನಂತರ ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಇಡೀ ದೇಶದಲ್ಲಿ ಚರ್ಚೆ ಆರಂಭವಾಗಿತ್ತು. ಇದಾದ ಬಳಿಕ ಯಾವುದೇ ಬಹಿರಂಗವಾದ ಹೇಳಿಕೆಗಳನ್ನು ನೀಡಿರಲಿಲ್ಲ. ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಮೂಲಕ 40 ಶೇ. ಕಮಿಷನ್ ಆರೋಪದ ವಿರುದ್ಧ ಕಾಂಗ್ರೆಸ್ ನೇರ ಹೋರಾಟಕ್ಕೆ ಮುಂದಾಗುವ ಸೂಚನೆ ನೀಡಿದೆ. ಬಿಲ್ ಬಾಕಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರದ ಇಲಾಖೆಗೆಗಳು 40 ಶೇ. ಕಮಿಷನ್ ಕೇಳುತ್ತವೆ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು. ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿದ್ದ ಗಂಭೀರ ಸ್ವರೂಪದ ಆರೋಪದಿಂದಾಗಿ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು.