ಸೌಜನ್ಯಾ ಪ್ರಕರಣ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು : ಸಿಎಂ ಸಿದ್ದರಾಮಯ್ಯ

ಮಂಗಳೂರು: ಕಾನೂನು ಕೈಗೆತ್ತಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ  ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪರಿಶೀಲನೆಗಾಗಿ ಇಲ್ಲಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ (ಜುಲೈ-01)ಮಂಗಳವಾರ ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ಯಾರೇ ಕಾನೂನು ಕೈಗೆತ್ತಿಕೊಂಡರೂ ತಪ್ಪು. ಕಾನೂನು ಕೈಗೆತ್ತಿಕೊಳ್ಳುವುದಕ್ಕೆ ಯಾರಿಗೂ ಅವಕಾಶ ನೀಡಬೇಡಿ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಇದನ್ನೂ ಓದಿ:ಸೌಜನ್ಯ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಿ : ಮುಖ್ಯಮಂತ್ರಿಗೆ ನಿಯೋಗ ಮನವಿ

ಧರ್ಮಸ್ಥಳದ ಸೌಜನ್ಯಾ ಪ್ರಕರಣ ಸಿಬಿಐ ತನಿಖೆ ನಡೆಸಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಮೇಲ್ಮನವಿ ಸಲ್ಲಿಸುವಂತೆ ಕುಟುಂಬದವರು ಒತ್ತಾಯಿಸಿದ್ದಾರೆ. ತೀರ್ಪನ್ನು ಓದಿಲ್ಲ. ಓದಿದ ನಂತರ ಈ ಬಗ್ಗೆ ಪರಿಶೀಲಿಸುತ್ತೇನೆ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಕಸ್ತೂರಿರಂಗನ್‌ ವರದಿ ಅನುಷ್ಠಾನದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಪರಿಸರ ರಕ್ಷಣೆಗೆ ನಾವು ಬದ್ಧ ಎಂದು ಪ್ರಶ್ನೆಯೊಂದಕ್ಕೆ  ಉತ್ತರಿಸಿದರು. ಬಿಟ್‌ ಕಾಯಿನ್‌ ಹಗರಣದ ತನಿಖೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿಟ್‌ ಕಾಯಿನ್‌ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ್ದೇವೆ. ಹೀಗೆಯೇ ತನಿಖೆ ಮಾಡಿ ಎನ್ನಲು ಆಗುತ್ತದೆಯೇ ಎಂದರು.

ಕರಾವಳಿ ಪ್ರದೇಶದ ಅಭಿವೃದ್ಧಿಗೆ ಬಜೆಟ್‌ನಲ್ಲಿ ಕಾರ್ಯಕ್ರಮಗಳನ್ನು ಪ್ರಕಟಿಸಿದ್ದೇವೆ. ಕರಾವಳಿ ಪ್ರದೇಶದಲ್ಲಿ ಮಳೆ ಜಾಸ್ತಿ ಆಗಿದೆ. ಅದರ ಪರಿಶಿಲನೆ ಮಾಡಲು ಬಂದಿದ್ದೇನೆ ಎಂದರು.

Donate Janashakthi Media

Leave a Reply

Your email address will not be published. Required fields are marked *