ಬೆಂಗಳೂರು: ಸಂಪುಟ ರಚನೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರ ಭೇಟಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ 5.30ಕ್ಕೆ ಕೊರೊನಾ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಡಳಿತಗಳ ಜತೆಗೆ ಸಭೆ ನಡೆಸಲಿದ್ದಾರೆ.
ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಆತಂಕ ಸೃಷ್ಠಿಯಾಗಿದ್ದು, ವಿಶೇಷವಾಗಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಂತೆಯೇ ಗಡಿ ಜಿಲ್ಲೆಯ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಗುತ್ತದೆ. ಈ ವೇಳೆ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಸಂಪುಟ ರಚನೆ : ಸಿಎಂಗೆ ಟೆನ್ಷನ್, ಹಳಬರಿಗೆ ಕೊಕ್?!
ರಾಜ್ಯದಲ್ಲೂ ಏಕಾಏಕಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬ ಮಾಹಿತಿ ನೀಡಿದರು. ನಿನ್ನೆ ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಗಡಿ ಜಿಲ್ಲೆಗಳ ಆಯುಕ್ತರೊಂದಿಗೆ ಮಾತುಕತೆ ನಡೆಸಿದ್ದ ಸಿಎಂ ಬೊಮ್ಮಾಯಿ ಕೋವಿಡ್ ಪರಿಸ್ಥಿತಿ ಕುರಿತಂತೆ ಮಾಹಿತಿ ಪಡೆದುಕೊಂಡಿದ್ದಾರೆ.
ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಕಠಿಣ ನಿರ್ಧಾರದ ಬಗ್ಗೆ ಗಡಿ ಜಿಲ್ಲೆಗಳು ಆದೇಶ ಹೊರಡಿಸಿದೆ. ಆದೇಶದ ಅನ್ವಯ ಕೇರಳಕ್ಕೆ ಹೊಂದಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ 18 ಗಡಿ ಪ್ರದೇಶಗಳಲ್ಲಿ ತಪಾಸಣೆ ನಡೆಸುವುದಾಗಿ ಸೂಚಿಸಿದ್ದು, ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಅಥವಾ ಲಸಿಕೆ ಆದವರಿಗೆ ಮಾತ್ರ ಪ್ರವೇಶ ನೀಡಲು ನಿರ್ಧರಿಸಿಲಾಗಿದೆ.
ಇದನ್ನು ಓದಿ: ಕೋವಿಡ್ ಸೋಂಕು ಹೆಚ್ಚಳ: ಕೇರಳ ರಾಜ್ಯದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್
ಇತ್ತ ಕೇರಳದಿಂದ ಚಾಮರಾಜನಗರ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸಲು ಸಿಬ್ಬಂದಿಯೇ ಇಲ್ಲ ಎನ್ನುವ ಪರಿಸ್ಥಿತಿ ಇದೆ. ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಕಣ್ಮರೆಯಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 212ರಲ್ಲಿ ಬರುವ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸಂಪೂರ್ಣ ನಿರ್ಲಕ್ಷ್ಯ ಎದುರಾಗಿದೆ.